ಹುಬ್ಬಳ್ಳಿ: ‘ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ₹125 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಸಿದ್ಧವಾಗಿದ್ದು, 15 ದಿನಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ’ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಲಾಗಿದೆ. ಈ ಸಂಬಂಧ 2–3 ಸಭೆಗಳನ್ನೂ ನಡೆಸಲಾಗಿದೆ. ಈಚೆಗೆ ನಡೆದ ಸಭೆಯಲ್ಲಿ ಮಾಸ್ಟರ್ ಪ್ಲಾನ್ ಸಿದ್ಧಗೊಳಿಲಾಗಿದೆ. ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಇತರ ಸೌಲಭ್ಯ ಕಲ್ಪಿಸುವ ಯೋಜನೆ ರೂಪಿಸಲಾಗಿದೆ’ ಎಂದು ತಿಳಿಸಿದರು.
‘ಯಲ್ಲಮ್ಮನ ಗುಡ್ಡ ಅಭಿವೃದ್ಧಿಗೆ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು, ಸಚಿವರು, ಜಿಲ್ಲಾಧಿಕಾರಿ ಹಾಗೂ ಎಲ್ಲ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ. ಎಲ್ಲಿಯೂ ಲೋಪವಾಗದಂತೆ ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸಲಾಗುವುದು’ ಎಂದು ಮಾಹಿತಿ ನೀಡಿದರು.
‘ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಬೆಂಗಳೂರು ಸೇರಿ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಯಾಗಲಿವೆ. ರೈತರ ಜಮೀನಿಗೆ ಹೆಚ್ಚಿನ ಬೆಲೆ ಬರಲಿದೆ. ಇದರಿಂದ ಯಾರಿಗೂ ಸಮಸ್ಯೆ ಇಲ್ಲ. ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲಾಗಿದೆ. ಹೆಸರು ಬದಲಾವಣೆಯಿಂದ ಯಾವುದೇ ಪರಿಣಾಮ ಆಗುವುದಿಲ್ಲ. ಆದರೆ, ಭಾವನಾತ್ಮಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರ ನಿರ್ಧಾರ ಕೈಗೊಂಡಿದೆ’ ಎಂದರು.
‘ಜನರಲ್ಲಿ ಮತ್ತೆ ಕೊರೊನಾ ಸೋಕು ಹರಡುವ ಆತಂಕ ಶುರುವಾಗಿದೆ. ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜನರು ಭಯಪಡಬೇಕಿಲ್ಲ. ಆದರೆ ಜಾಗ್ರತೆ ವಹಿಸಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.