ADVERTISEMENT

23ರಂದು ಶಿಕ್ಷಣ ಸಚಿವರ ಮನೆಮುಂದೆ ಮೌನವೃತ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 9:44 IST
Last Updated 16 ಮಾರ್ಚ್ 2021, 9:44 IST

ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘ ಮತ್ತು ವಿವಿಧ ಶಿಕ್ಷಕ ಸಂಘಟನೆಗಳ ಹೋರಾಟ ಸಮನ್ವಯ ಸಮಿತಿಯು ಮಾ. 23ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ತನಕ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ ಕುಮಾರ್‌ ಅವರ ಮನೆಮುಂದೆ ಉಪವಾಸ ಹಾಗೂ ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಮೌನವೃತ ಆಚರಿಸಲು ನಿರ್ಧರಿಸಿದೆ.

ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಘಟಕದ ಸಂಚಾಲಕ ಬಸವರಾಜ ಧಾರವಾಡ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ವಿಸ್ತರಿಸಬೇಕು, ಖಾಸಗಿ ಶಾಲಾ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ಕಲ್ಪಿಸಬೇಕು, ಎನ್‌ಪಿಎಸ್‌ ಬದಲಾಗಿದೆ ಒಪಿಎಸ್‌ ಜಾರಿಗೊಳಿಸಬೇಕು. ಖಾಸಗಿ ಶಾಲಾ ಶಿಕ್ಷಕರಿಗೆ ಸೇವಾಭದ್ರತೆ ಒದಗಿಸಬೇಕು, ಸರ್ಕಾರಿ ನೌಕರರಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಖಾಸಗಿ ಶಾಲಾ ಶಿಕ್ಷಕರಿಗೂ ಕೊಡಬೇಕು ಮತ್ತು ಕಾಲ್ಪನಿಕ ವೇತನ ನಿಗದಿಗೊಳಿಸಲು ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಸದನ ಸಮಿತಿ ನೀಡಿರುವ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು’ ಎನ್ನುವ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ಮಾಡಲಾಗುವುದು’ ಎಂದರು.

‘ನಿಮ್ಮ ಬೇಡಿಕೆಗಳಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದು ಶಿಕ್ಷಣ ಸಚಿವರು ಭರವಸೆ ನೀಡಿದ್ದರು. ಆದರೆ ಬಜೆಟ್‌ನಲ್ಲಿ ಇದಕ್ಕೆ ಸಂಬಂಧಿಸಿದ ಯಾವುದೇ ಅಂಶಗಳಿಲ್ಲ. ಆದ್ದರಿಂದ ಪೂರಕ ಬಜೆಟ್‌ನಲ್ಲಿ ನಮಗೆ ನೆರವಾಗಬೇಕು. ಸಚಿವರ ಮನೆ ಮುಂದೆ ಹೋರಾಟದ ಬಳಿಕ ಮಾ. 31ರ ತನಕ ಸಮಯ ನೀಡಲಾಗುವುದು. ಆಗಲೂ ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಶಾಲೆಗಳನ್ನು ಬಂದ್‌ ಮಾಡಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್‌, ಸಂಘಟನಾ ಕಾರ್ಯದರ್ಶಿ ಶ್ಯಾಮ ಮಲ್ಲನಗೌಡ್ರ, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಸ್‌. ಹುದ್ದಾರ, ಹುಬ್ಬಳ್ಳಿ ಘಟಕದ ಅಧ್ಯಕ್ಷ ಬಸವರಾಜ ಮಳಗಿ, ಶಹರ ಕಾರ್ಯದರ್ಶಿ ಸಂಗಪ್ಪ ಪಟ್ಟಣಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.