ಅಮ್ಮಿನಬಾವಿ (ಉಪ್ಪಿನಬೆಟಗೇರಿ): ‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು, ಜನರು ಇದರಿಂದ ದೂರವಿರಬೇಕು’ ಎಂದು ನವನಗರದ ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆಯ ಕ್ಯಾನ್ಸರ್ ರೋಗ ಲಕ್ಷಣಗಳ ತಜ್ಞ ಡಾ. ಉಮೇಶ ಹಳ್ಳಿಕೇರಿ ಹೇಳಿದರು.
ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ನವನಗರದ ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಬೆಂಗಳೂರಿನ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕ್ಯಾನ್ಸರ್ ಅರಿವು ಜಾಗೃತಿ ಮತ್ತು ಉಚಿತ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.
ಧಾರವಾಡ ಜಿಲ್ಲೆಯ ಎಲ್ಲಾ ಹಳ್ಳಿಗಳಲ್ಲಿ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ ಆಯೋಜಿಸಿ ಜನರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ. ಪ್ರಸ್ತುತ ಅತ್ಯಾಧುನಿಕ ಉಪಕರಣಗಳನ್ನು ಕ್ಯಾನ್ಸರ್ ಆಸ್ಪತ್ರೆ ಹೊಂದಿದೆ ಎಂದು ಹೇಳಿದರು.
ಅಮ್ಮಿನಬಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬೀನಾ ಶೂರಪಾಲಿ ಮಾತನಾಡಿ, ಕ್ಯಾನ್ಸರ್ ಪ್ರಥಮ ಹಂತದಲ್ಲಿದ್ದಾಗ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದು ಈ ರೋಗವನ್ನು ನಿವಾರಿಸಿಕೊಳ್ಳಬೇಕು ಎಂದರು.
ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ 30 ಜನರ ಸ್ತನ, 25 ಜನರ ಗರ್ಭಕಂಠ, 105 ಜನರ ಬಾಯಿ ಕ್ಯಾನ್ಸರ್ ತಪಾಸಣೆ ಮಾಡಲಾಯಿತು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಧಾರವಾಡ ಜಿಲ್ಲಾ ಶಾಖೆ ವತಿಯಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ಆರೋಗ್ಯಾಧಿಕಾರಿ ಡಾ. ಪ್ರಿಯಾಂಕಾ ನಾಯ್ಕ, ಸಂತಾನಿ ದಂಡಿನ, ಮೊಹಮ್ಮದ್ ಜಬೀರ, ಶಿಲ್ಪಾ ಹೂಲಿಕಟ್ಟಿ, ವೆಂಕಟೇಶ ಲಮಾಣಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.