ADVERTISEMENT

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ತ್ವರಿತಗೊಳಿಸಿ: ಜಿ.ಪದ್ಮಾವತಿ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2025, 5:36 IST
Last Updated 24 ಅಕ್ಟೋಬರ್ 2025, 5:36 IST
ಧಾರವಾಡದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಚ್.ಎಚ್.ಕುಕನೂರ, ಜಿ.ಪದ್ಮಾವತಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ ಪಾಲ್ಗೊಂಡಿದ್ದರು
ಧಾರವಾಡದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಚ್.ಎಚ್.ಕುಕನೂರ, ಜಿ.ಪದ್ಮಾವತಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ ಪಾಲ್ಗೊಂಡಿದ್ದರು   

ಪ್ರಜಾವಾಣಿ ವಾರ್ತೆ

ಧಾರವಾಡ: ‘ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಮಂದಗತಿಯಲ್ಲಿ ಸಾಗಿದೆ. ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸಮೀಕ್ಷೆ ಕಾರ್ಯ ಚುರುಕುಗೊಳಿಸಿ ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ADVERTISEMENT

‘ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಸಲಾಗುತ್ತಿದೆ. ದೇವದಾಸಿಯರ ಮಕ್ಕಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬೇಕು, ಸ್ವಾವಲಂ‌ಬಿಗಳಾಗಬೇಕು. ಅಂಥವರನ್ನು ಗುರುತಿಸಿ ಅವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಉದ್ದೇಶದಿಂದ ಸಮೀಕ್ಷೆ ಮಾಡಲಾಗುತ್ತಿದೆ’ ಎಂದರು.

‘ಉದ್ಯೋಗಿನಿ ಯೋಜನೆಯಡಿ ದೇವದಾಸಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಬ್ಯಾಂಕ್‌ಗಳು ಸಾಲ ಒದಗಿಸಬೇಕು. ದೇವದಾಸಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಅರ್ಜಿ ಭರ್ತಿ ಮಾಡಲು ತಿಳಿಯದಿದ್ದರೆ ಬ್ಯಾಂಕ್‌ ನೌಕರರು ಸಹಾಯ ಮಾಡಬೇಕು. ಅವರನ್ನು ಬ್ಯಾಂಕ್‌ಗೆ ಅಲೆದಾಡುವಂತೆ ಮಾಡಬಾರದು’ ಎಂದು ಹೇಳಿದರು.

‘ಭಿಕ್ಷಾಟನೆಯಲ್ಲಿ ತೊಡಗಿದ್ದರೆ ಅಂಥವರನ್ನು ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಗಮನ ಹರಿಸಬೇಕು. ಸ್ವಯಂ ಉದ್ಯೋಗ ಮಾಡುವಂತೆ ಅವರಿಗೆ ಉತ್ತೇಜನ ನೀಡಬೇಕು’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕನೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಲೀಡ್‌ ಬ್ಯಾಂಕ್‌ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಗಡಾದ್, ಜಿಲ್ಲಾ ನಿರೂಪಣಾಧಿಕಾರಿ ಕಮಲಾ ಬೈಲೂರ, ಮಹಿಳಾ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಪಾಟೀಲ, ದೇವದಾಸಿ ಪುನರ್ವಸತಿ ಯೋಜನೆಯ ನೋಡಲ್ ಅಧಿಕಾರಿ ಮಧುಸೂದನ್, ಅಭಿವೃದ್ಧಿ ನಿರೀಕ್ಷಕಿ ನಂದಿನಿ ಕುಂಬಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.