ಹುಬ್ಬಳ್ಳಿ: ’ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2019ರ ಅಧಿಸೂಚನೆ ಪ್ರಕಾರ ಹುದ್ದೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಮನವಿ ಮಾಡಲಾಗುವುದು’ ಎಂದು ಶಾಸಕ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಹೇಳಿದರು.
ನಗರದ ಗೋಕುಲ ರಸ್ತೆಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2814 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಆರ್ಥಿಕ ಇಲಾಖೆಯ 1 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದೆ. ಆದರೆ, ಇದು ನಮಗೆ ಸಾಲಲ್ಲ’ ಎಂದರು.
‘ನಮ್ಮ ಭಾಗಕ್ಕೆ ಹೊಸದಾಗಿ ಇನ್ನೂ 700 ಹೊಸ ಬಸ್‌ಗಳು ಬರುತ್ತಿವೆ. ಇದಕ್ಕೆ ಹೆಚ್ಚುವರಿಯಾಗಿ 700 ಚಾಲಕ ಕಂ ನಿರ್ವಾಹಕರೂ ಬೇಕು. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು, ಹಳೆಯ ಅಧಿಸೂಚನೆಯಂತೆ ಎಲ್ಲಾ ಹುದ್ದೆಗಳ ನೇಮಕಾತಿ ಮಾಡಬೇಕು’ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸಿ, ಇನ್ನು 2– 3 ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಇದೇ ವೇಳೆ ಹುದ್ದೆಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳ ಪರವಾಗಿ ಹೋರಾಟಗಾರ ಸುಭಾಸಸಿಂಗ್ ಜಮಾದಾರ ಅವರು, ‘ಮೂಲ ಉಲ್ಲೇಖದ ಪ್ರಕಾರ ಎಲ್ಲಾ ಹುದ್ದೆಗಳ ನೇಮಕಾತಿಗೆ ಕ್ರಮವಹಿಸಬೇಕು’ ಎಂದು ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಅವರಿಗೆ ಮನವಿ ಸಲ್ಲಿಸಿದರು.
‘ಮತ್ತೆ 1 ಸಾವಿರ ಹುದ್ದೆಗಳಿಗೆ ಹೊಸ ಆದೇಶ ಮಾಡದೇ ಈಗ ಚಾಲನಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನೇ ಚಾಲಕ ಕಂ ನಿರ್ವಾಹಕ ಹುದ್ದೆಗೆ ಪರಿಗಣಿಸಬೇಕು‘ ಎಂದು ಮನವಿ ಮಾಡಿದರು.
ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.