ಹುಬ್ಬಳ್ಳಿ: ‘ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ ಹಾಗೂ ಉತ್ತಮ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಗ್ರಾಮದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನ ಕುಸುಗಲ್ ಗ್ರಾಮದ ಸರ್ಕಾರಿ ಪೌಢಶಾಲೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಕುಂದುಕೊರತೆ ನಿವಾರಣೆ ಸಭೆಯಲ್ಲಿ ಮಾತನಾಡಿದ ಅವರು, ’ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯ ಕಲ್ಲಿಸಿಕೊಡಬೇಕು’ ಎಂದರು.
ನಂತರ ಅವರು, ನರೇಗಾ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಸ್ಮಶಾನ, ಕೆರೆಯ ಪ್ರಗತಿ, ನಿರ್ಮಾಣ ಹಂತದಲ್ಲಿರುವ ಶಾಲಾ ಮೈದಾನ, ಶೌಚಾಲಯ ಕಾಮಗಾರಿ ವೀಕ್ಷಿಸಿದರು. ಕೂಸಿನ ಮನೆಗೂ ಭೇಟಿ ನೀಡಿ ಮಕ್ಕಳ ಹಾಜರಾತಿ ಪರಿಶೀಲಿಸಿದರು.
ಇದೇ ವೇಳೆ ಮಕ್ಕಳಿಗೆ ನೀಡುವ ಆಹಾರ ಸಾಮಗ್ರಿಯನ್ನು ಪರಿಶೀಲಿಸಿದ ಅವರು, ‘ಆಹಾರ ತಯಾರಿಕೆಯಲ್ಲಿ ಸ್ವಚ್ಛತೆ ಕಾಯ್ದುಕೊಂಡು, ಮಕ್ಕಳಿಗೆ ಗುಣಮಟ್ಟದ ಆಹಾರ ವಿತರಿಸಬೇಕು’ ಎಂದು ಸಿಬ್ಬಂದಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯದಲ್ಲಿದ್ದ ವಿದ್ಯಾರ್ಥಿಗಳನ್ನು ಮಾತನಾಡಿಸಿ, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಮೂಲಸೌಕರ್ಯದ ಬಗ್ಗೆ ಮಾಹಿತಿ ಪಡೆದರು.
ಇಲ್ಲಿನ ಪ್ರಾಥಮಿಕ ಪಶುಪಾಲನೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸೌಲಭ್ಯ ಪರಿಶೀಲಿಸಿದರು.
ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ತಾಲ್ಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಧ್ಯಕ್ಷ ಹಾಗೂ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.