ಧಾರವಾಡ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಹಾಲಿ ಶಾಸಕರು, ಸಂಸದರು ಭಾಗಿಯಾಗಿರುವ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಇದ್ದು, ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿನಯ ಕುಲಕರ್ಣಿ ಎರಡು ಬಾರಿ ಶಾಸಕರಾಗಿದ್ದರು. ಹೀಗಾಗಿ ಈ ಪ್ರಕರಣದ ವಿಚಾರಣೆ ಜನಪ್ರತಿನಿಧಗಳ ನ್ಯಾಯಾಲಯದಲ್ಲಿ ನಡೆಯಬೇಕು ಎಂದು ಅರ್ಜಿ ಸಲ್ಲಿಸಿ, ಆರೋಪಿ ಪರ ವಕೀಲರಾದ ಬಾಹುಬಲಿ ಧನವಾಡೆ ನ್ಯಾಯಾಲಯದ ಗಮನ ಸೆಳೆದಿದ್ದರು.
ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರು, 'ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವಿನಯ ಕುಲಕರ್ಣಿ ಮಾಜಿ ಶಾಸಕ ಆಗಿರುವುದರಿಂದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟು, ಪ್ರಕರಣದ ವರ್ಗಾವಣೆಗೆ ಆದೇಶ ಹೊರಡಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕಳೆದ ನ. 5 ರಂದು ಬಂಧಿಸಿದ್ದರು. ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಸಿಬಿಐ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡಾ ಸಲ್ಲಿಸಿದೆ. ಮುಂದಿನ ದಿನಗಳಲ್ಲಿ ಪ್ರಕರಣದ ವಿಚಾರಣೆ ಬೆಂಗಳೂರಿನ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ವಿನಯ ಪರ ವಕೀಲರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.