ADVERTISEMENT

ಬಾಲಕಿ ಜೊತೆ ಒತ್ತಾಯದ ಲೈಂಗಿಕ ಕ್ರಿಯೆ: ಆರೋಪಿ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 21:42 IST
Last Updated 4 ನವೆಂಬರ್ 2022, 21:42 IST
   

ಬೆಂಗಳೂರು: ‘ಪೊಲೀಸರು ವೇಶ್ಯಾಗೃಹಗಳ ಮೇಲೆ ದಾಳಿ ನಡೆಸಿದಾಗ ಸಿಕ್ಕಿ ಹಾಕಿಕೊಂಡ ಪುರುಷ ರನ್ನು ಗ್ರಾಹಕರು ಎಂದು ಪರಿಗಣಿಸಬಹುದು. ಆದರೆ, ಸಂತ್ರಸ್ತ ಬಾಲಕಿಯರೇನಾದರೂ ಈ ಪುರುಷ ತನ್ನೊಂದಿಗೆ ಒತ್ತಾಯಪೂರ್ವಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಆರೋಪಿಸಿದರೆ ಆಗ ಅಂತಹವರನ್ನು ಗ್ರಾಹಕ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

‘ನನ್ನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಷರೀಫ್ ಅಲಿಯಾಸ್ ಫಾಹೀಂ ಹಾಜಿ (45) ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ಪ್ರಕರಣವೇನು?:17 ವರ್ಷದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ಆಕೆಯನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು ಬಾಲಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವಿಡಿಯೊ ರೆಕಾರ್ಡ್ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದರು. ಅರ್ಜಿದಾರರಿಂದ ತಪ್ಪಿಸಿಕೊಂಡಿದ್ದ ಸಂತ್ರಸ್ತ ಬಾಲಕಿ ಪೋಷಕರಿಗೆ ಈ ಅಂಶವನ್ನು ತಿಳಿಸಿ ಪೊಲೀಸ್ ಠಾಣೆಗೆ ದೂರುನೀಡಿದ್ದರು.

ADVERTISEMENT

ದೂರು ದಾಖಲಿಸಿಕೊಂಡಿದ್ದ ಪೊಲೀಸರು ಅರ್ಜಿದಾರ ಸೇರಿದಂತೆ ಇತರೆ ಆರೋಪಿಗಳ ವಿರುದ್ಧ ಮಾನವ ಕಳ್ಳಸಾಗಣೆ ನಿಯಂತ್ರಣ ಕಾಯ್ದೆ, ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.