ADVERTISEMENT

ಕಾಂಗ್ರೆಸ್‌ ಕಾರ್ಯಕರ್ತರಿಂದ ಎರಡು ಕಡೆ ಮತದಾನ: ಆರೋಪ

​ಪ್ರಜಾವಾಣಿ ವಾರ್ತೆ
Published 19 ಮೇ 2018, 11:12 IST
Last Updated 19 ಮೇ 2018, 11:12 IST

ಗದಗ: ‘ಗದಗ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ಕಾರ್ಯಕರ್ತರು ಎರಡು ಕಡೆಗಳಲ್ಲಿ ಮತದಾನ ಮಾಡಿದ್ದಾರೆ. 8 ಸಾವಿರಕ್ಕೂ ಹೆಚ್ಚು ಖೊಟ್ಟಿ ಮತಗಳು ಚಲಾವಣೆಯಾಗಿವೆ’ ಎಂದು ಸೋಲು ಅನುಭವಿಸಿದ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗದುಗಿನ 4 ಮತ್ತು 5ನೇ ವಾರ್ಡ್‌ನ ಮತದಾರರ ಪಟ್ಟಿಯಲ್ಲಿ ಕೆಲವು ಕಾಂಗ್ರೆಸ್‌ ಮುಖಂಡರ ಹೆಸರುಗಳಿವೆ. ಅವರು ಈ ಎರಡೂ ಕಡೆ ಮತದಾನ ಮಾಡಿದ್ದಾರೆ. ಚುನಾವಣಾ ಆಯೋಗ ಗದಗ ಕ್ಷೇತ್ರದಲ್ಲಿ ಮರು ಮತದಾನ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಎಚ್.ಕೆ. ಪಾಟೀಲರು ತಮ್ಮ ಪಕ್ಷದ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಎರಡು ಬಾರಿ ಮತದಾನ ಮಾಡುವ ಭಾಗ್ಯವನ್ನು ನೀಡಿದ್ದಾರೆ. ಹುಲಕೋಟಿಯಲ್ಲಿ ಮೃತರ ಹೆಸರಿನಲ್ಲಿ ಕೆಲವರು ಮತ ಚಲಾಯಿಸಿ, ಪ್ರಜಾಪ್ರಭುತ್ವಕ್ಕೆ ಮೋಸ ಮಾಡಿದ್ದಾರೆ’ ಎಂದರು.

ADVERTISEMENT

‘ಹುಲಕೋಟಿ ಮತಗಟ್ಟೆಗಳಿಗೆ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೆವು. ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಖೊಟ್ಟಿ ಮತದಾನದ ಕುರಿತು ಬಿಜೆಪಿ ರಾಷ್ಟ್ರೀಯ ನಾಯಕರು, ಸಮಗ್ರ ದಾಖಲೆಗಳ ಸಮೇತವಾಗಿ ಮೇ 21ರಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.

‘ಗದಗ ತಾಲ್ಲೂಕು ಪಂಚಾಯ್ತಿಯ ಕಾಂಗ್ರೆಸ್ ಸದಸ್ಯ ವಿದ್ಯಾಧರ ದೊಡ್ಡಮನಿ ಅವರು ಗದಗ ನಗರ ಮತ್ತು ಕೋಟುಮಚಗಿ ಗ್ರಾಮದಲ್ಲಿ ಮತ ಚಲಾಯಿಸಿದ್ದಾರೆ. ಅವರ ಸದಸ್ಯತ್ವ ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಮನೋಜ್‌ ಜೈನ್‌ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

ಬಿಜೆಪಿ ಶಹರ ಘಟಕದ ಅಧ್ಯಕ್ಷ ಜಗನ್ನಾಥ ಭಾಂಡಗೆ, ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಅಶ್ವಿನಿ ಜಗತಾಪ, ಎಂ.ಎಂ.ಹಿರೇಮಠ, ಕಾಂತಿಲಾಲ್ ಬನ್ಸಾಲಿ, ಬಸವರಾಜ ಬೆಳಧಡಿ, ಮಂಜುನಾಥ ಮುಳಗುಂದ, ಅನಿಲ್ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.