ADVERTISEMENT

ಬಸ್ ಪ್ರಯಾಣ ದರ ಏರಿಕೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2013, 11:15 IST
Last Updated 18 ಜೂನ್ 2013, 11:15 IST

ಗದಗ: ಪೆಟ್ರೋಲ್ ಹಾಗೂ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣದ ದರ  ಏರಿಕೆ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ಮಾನವ ಸರಪಳಿ ರಚಿಸಿದ್ದರು.

ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡದಾರರಿಗೆ ಕೆ.ಜಿ. ಒಂದು ರೂಪಾಯಿ ದರದಲ್ಲಿ 30 ಕೆ.ಜಿ. ಅಕ್ಕಿ ವಿತರಿಸುವುದುನ್ನು ಮುಂದಕ್ಕೆ ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಅಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಶೇ. 10.50ರಷ್ಟು ಹಾಗೂ ಬಿಎಂಟಿಸಿ ಬಸ್ ಪ್ರಯಾಣ ದರದಲ್ಲಿ ಶೇ. 16ರಷ್ಟು ಹೆಚ್ಚಳ ಮಾಡಿರುವುದು ಸಾರ್ವಜನಿಕರಿಗೆ ಹೊರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಹೆಬಸೂರ ಮಾತನಾಡಿ, ಕೇಂದ್ರದ ಯುಪಿಎ ಸರ್ಕಾರ ನಾಲ್ಕು ವರ್ಷದ ಆಡಳಿತ ಅವಧಿಯಲ್ಲಿ ನಡೆಸಿದ ಭ್ರಷ್ಟಾಚಾರವನ್ನು ಮುಚ್ಚಿಡಲು ಜನಸಾಮಾನ್ಯರ ಮೇಲೆ ಬೆಲೆ ಏರಿಕೆಗಳಂತಹ ಸಮಸ್ಯೆ ಮೂಲಕ ಗಮನ ಬೇರೆಡೆ ಸೆಳೆಯುವಂತೆ ಮಾಡುತ್ತಿದೆ. ಬಿಪಿಎಲ್ ಕಾರ್ಡ್‌ದಾರರಿಗೆ  ಕಡಿಮೆ ಬೆಲೆಯಲ್ಲಿ ಅಕ್ಕಿ ನೀಡಲು ವಿಳಂಬ ಮಾಡುತ್ತಿದೆ. ಹೆಚ್ಚಿನ ಮದ್ಯದ ಅಂಗಡಿಗಳನ್ನು ತೆರೆಯಲು ಸೂಚನೆ ನೀಡಿರುವುದು ರಾಜ್ಯವನ್ನು ಅಧೋಗತಿಗೆ ತೆಗೆದುಕೊಂಡು ಹೋಗುವ ನಿರ್ಧಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ನಗರಸಭಾ ಮಾಜಿ ಸದಸ್ಯ ಎಂ.ಎಂ.ಹಿರೇಮಠ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಮೇಲಿಂದ ಮೇಲೆ ಬೆಲೆ ಏರಿಕೆಯ ಅಸ್ತ್ರವನ್ನು ಉಪಯೋಗಿಸುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸರ್ಕಾರಕ್ಕೆ ಜನತೆ ಪಾಠ ಕಲಿಸಲಿದ್ದಾರೆ ಎಂದರು.

ತೋಟೋಸಾ ಭಾಂಡಗೆ,  ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಶ್ರೀಕಾಂತ ಖಟವಟೆ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣ ಹೊಂಬಾಳಿ, ನಗರಸಭಾ ಮಾಜಿ ಸದಸ್ಯ ಮೋಹನ ಮಾಳಶೆಟ್ಟಿ, ಶ್ರೀನಿವಾಸ ಭಾಂಡಗೆ, ಕಾಂತಿಲಾಲ ಬನ್ಸಾಲಿ, ಪ್ರೇಮನಾಥ ಬಣ್ಣದ, ಅರವಿಂದ ಹುಲ್ಲೂರ, ಪತ್ತಾರ, ಶಂಕ್ರಪ್ಪ ಇಂಡಿ, ಪತ್ತಾರ, ಸುರೇಶ ಗುಂಜಾಳ, ಬಸವರಾಜ ಸಿರಿ,ಬೂದಪ್ಪ ಹಳ್ಳಿ, ವಿನಾಯಕ ಹಬೀಬ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.