ADVERTISEMENT

ಕ್ರೀಡೆಯಿಂದ ಆರೋಗ್ಯ ವೃದ್ಧಿ: ಶಾಸಕ ಡಾ.ಚಂದ್ರು

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 4:19 IST
Last Updated 30 ಅಕ್ಟೋಬರ್ 2025, 4:19 IST
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರು ಕ್ರೀಡಾಜ್ಯೋತಿ ಸ್ವೀಕರಿಸಿದರು
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರು ಕ್ರೀಡಾಜ್ಯೋತಿ ಸ್ವೀಕರಿಸಿದರು   

ಮುಂಡರಗಿ: ‘ಕ್ರೀಡೆಗಳಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆದ್ದರಿಂದ ಕ್ರೀಡೆಗಳನ್ನು ಕೇವಲ ಸೋಲು, ಗೆಲುಗಳಿಗೆ ಮಾತ್ರ ಸೀಮಿತಗೊಳಿಸಬಾರದು' ಎಂದು ಶಾಸಕ ಡಾ.ಚಂದ್ರು ಲಮಾಣಿ ತಿಳಿಸಿದರು.

ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆಯು ಮಂಗಳವಾರ ಪಟ್ಟಣದ ಜಗದ್ಗುರು ಅನ್ನದಾನೀಶ್ವರ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಅಥ್ಲೆಟಿಕ್‌ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಹಲವು ವರ್ಷಗಳಿಂದ ಸರ್ಕಾರಿ ಪ್ರೌಢಶಾಲೆಯ ಬೇಡಿಕೆ ಇತ್ತು. ಪ್ರಸ್ತುತ ಇಲ್ಲಿಯ ಎರಡು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರಿ ಪ್ರೌಢಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಅನ್ನದಾನೀಶ್ವರ ಸ್ವಾಮೀಜಿ ಎಂಸಿಎಸ್ ಶಾಲೆಗೆ ಜಮೀನು ದಾನ ಮಾಡಿದ್ದಾರೆ. ಹೀಗಾಗಿ ಶಾಲೆಗೆ ಅನ್ನದಾನೀಶ್ವರ ಶಾಲೆ ಎಂದು ನಾಮಕರಣ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಅನ್ನದಾನೀಶ್ವರ ಸ್ವಾಮೀಜಿ ಮಾತನಾಡಿ, ಪಟ್ಟಣದಲ್ಲಿ ಸರ್ಕಾರಿ ಶಾಲೆ, ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಕ್ರೀಡಾಂಗಣ, ರುದ್ರಭೂಮಿ ಮೊದಲಾವುಗಳಿಗೆ ಮಠದಿಂದ ಹಲವಾರು ಎಕರೆ ಜಮೀನನ್ನು ಉಚಿತವಾಗಿ ನೀಡಲಾಗಿದೆ. ನೂತನವಾಗಿ ಆರಂಭವಾಗಲಿರುವ ಸರ್ಕಾರಿ ಶಾಲೆಗಳಿಗೆ ಅನ್ನದಾನೀಶ್ವರ ಶಾಲೆ ಎಂದು ನಾಮಕರಣ ಮಾಡುತ್ತಿರುವುದು ಶ್ಲಾಘನೀಯ ಎಂದು ಹರ್ಷವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಜಿ.ಬಿ.ಗೊಲ್ಲರಟ್ಟಿ ನಿರೂಪಿಸಿದರು. ಮುಖಂಡರಾದ ಆನಂದಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ, ಲಿಂಗರಾಜಗೌಡ ಪಾಟೀಲ, ಪ್ರಲ್ಹಾದ ಹೊಸಮನಿ, ಜ್ಯೋತಿ ಹಾನಗಲ್, ನಾಗರಾಜ ಹಳ್ಳಿಕೇರಿ, ಶಿವಕುಮಾರ ಸಜ್ಜನರ, ಬಸವರಾಜ ಬಿಳಿಮಗ್ಗದ, ದೇವು ಹಡಪದ, ಯಲ್ಲಪ್ಪ ಗಣಾಚಾರಿ, ಮಂಜುನಾಥ ಮುಧೋಳ, ಎ.ಡಿ.ಬಂಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.