ADVERTISEMENT

ರಾಹುಲ್ ಗಾಂಧಿ ಆರೋಪ ಹಾಸ್ಯಾಸ್ಪದ: ರಾಜು ಕುರುಡಗಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 5:21 IST
Last Updated 4 ಆಗಸ್ಟ್ 2025, 5:21 IST
ರಾಜು ಕುರಡಗಿ
ರಾಜು ಕುರಡಗಿ   

ಗದಗ: ಮತಕಳ್ಳತನದ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಮಸಿ ಬಳಿಯಲು ಯತ್ನಿಸುತ್ತಿರುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಿಲುವು ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಟೀಕಿಸಿದ್ದಾರೆ.

‘ದೇಶದ ಜನರ ವಿಶ್ವಾಸ ವನ್ನು ಗಳಿಸುವಲ್ಲಿ ರಾಹುಲ್ ಗಾಂಧಿ ವಿಫಲರಾಗಿದ್ದಾರೆ. ಸೋಲಿನ ಅವಮಾನದಿಂದ ಬಳಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.

‘ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಸಂವಿಧಾನದ ಕಗ್ಗೊಲೆ ಮಾಡಿದ್ದರು. ಈಗ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಸುಳ್ಳು ಅಪವಾದ ಹೊರಿಸುವ ಮೂಲಕ ದೇಶದ ಜನತೆಗೆ ಹಾಗೂ ಚುನಾವಣಾ ಆಯೋಗಕ್ಕೆ ಅವಮಾನ ಮಾಡುತ್ತಿದ್ದಾರೆ. ಈ ಸುಳ್ಳು ಆರೋಪದ ಹಿಂದೆ ಕಾಂಗ್ರೆಸ್ ಸಂಚು ರೂಪಿಸುತ್ತಿದೆ’ ಎಂದು ಕಿಡಿಕಾರಿದ್ದಾರೆ. 

ADVERTISEMENT

‘ಮತ ಕಳ್ಳತನ ಆಗಿದೆ ಎಂದು ತಮ್ಮ ಬಳಿ ಪುರಾವೆ ಇದೆ ಎಂದು ರಾಹುಲ್ ಗಾಂಧಿ ಆದಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳುತ್ತಿದ್ದಾರೆ. ಅವರ ಬಳಿ ಪುರಾವೆ ಇದ್ದಿದ್ದರೆ ಅವರು ನ್ಯಾಯಾಲಕ್ಕೆ ಹೋಗಲಿ, ಅದನ್ನ ಬಿಟ್ಟು ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಏಕೆ’ ಎಂದು ಪ್ರಶ್ನಿಸಿದ್ದಾರೆ.

‘ಮೂರನೇ ಬಾರಿ ನರೇಂದ್ರ ಮೋದಿಯವರು ದೇಶದ ಪ್ರಧಾನಿ ಆಗಿರುವುದನ್ನು ಸಹಿಸಿಕೊಳ್ಳದ ಕಾಂಗ್ರೆಸ್ ನಾಯಕರು ಈ ರೀತಿ  ಅಪಪ್ರಚಾರ ಮಾಡುವ ಮೂಲಕ ದೇಶದ ಮತದಾರರ ಮುಂದೆ ನಗೆಪಾಟಲಿಗೆ ಈಡಾಗುತ್ತಿದ್ದಾರೆ’ ಎಂದು‍ ವ್ಯಂಗ್ಯವಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.