ADVERTISEMENT

ಎರಡನೇ ಅಲೆ ಎದುರಿಸಲು ಸನ್ನದ್ಧ: ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ

ವಾರದಿಂದ ಈಚೆಗೆ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 4:51 IST
Last Updated 31 ಮಾರ್ಚ್ 2021, 4:51 IST
ಆಯುಷ್ ಇಲಾಖೆಯಿಂದ ಸಿದ್ಧಪಡಿಸಲಾದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿಟ್‌ ಅನ್ನು ವಸತಿ ಶಾಲೆಯ ಮಕ್ಕಳಿಗೆ ಸಚಿವ ಸಿ.ಸಿ.ಪಾಟೀಲ ಸಾಂಕೇತಿಕವಾಗಿ ವಿತರಿಸಿದರು
ಆಯುಷ್ ಇಲಾಖೆಯಿಂದ ಸಿದ್ಧಪಡಿಸಲಾದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿಟ್‌ ಅನ್ನು ವಸತಿ ಶಾಲೆಯ ಮಕ್ಕಳಿಗೆ ಸಚಿವ ಸಿ.ಸಿ.ಪಾಟೀಲ ಸಾಂಕೇತಿಕವಾಗಿ ವಿತರಿಸಿದರು   

ಗದಗ: ‘ಒಂದು ವಾರದಿಂದ ಈಚೆಗೆ ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ’ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಶಾಸಕರು, ಸಂಸದರು ಹಾಗೂ ಎಲ್ಲ ಜನಪ್ರತಿನಿಧಿಗಳ ಜತೆಗೆ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಲಸಿಕೆ ಸಂಗ್ರಹಣೆ, ಪಿಪಿಇ ಕಿಟ್‌, ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ಗಳ ಲಭ್ಯತೆ ಕುರಿತು ಮಾಹಿತಿ ಪಡೆಯಲಾಗಿದೆ. ಜಿಲ್ಲೆಯಲ್ಲಿ ಇವೆಲ್ಲವೂ ಅಗತ್ಯಕ್ಕೆ ತಕ್ಕಷ್ಟು ಲಭ್ಯವಿದ್ದು, ಸೋಂಕು ಉಲ್ಬಣಗೊಂಡರೆ ಅದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ಸಿದ್ಧವಾಗಿದೆ’ ಎಂದು ಹೇಳಿದರು.

‘ಕೋವಿಡ್‌–19 ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯ. ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಕೋವಿಡ್‌–19 ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ’ ಎಂದು ಹೇಳಿದರು.

ADVERTISEMENT

‘ಜಿಲ್ಲೆಯಲ್ಲಿ ಈಗಾಗಲೇ 57 ಕೇಂದ್ರಗಳಲ್ಲಿ ಕೋವಿಡ್‌–19 ಲಸಿಕೆ ಹಾಕಲಾಗುತ್ತಿದೆ. ಇದರ ಜತೆಗೆ ಏಪ್ರಿಲ್‌ 1ರಿಂದ 121 ಲಸಿಕಾ ಕೇಂದ್ರಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಕೋವಿಡ್‌–19 ಲಸಿಕೆ ಸಾಧನೆಯಲ್ಲಿ ಗದಗ ಜಿಲ್ಲೆ ಶೇ 39 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನು 15 ದಿನಗಳಲ್ಲಿ ಜಿಲ್ಲೆ ಮೂರನೇ ಸ್ಥಾನಕ್ಕೆ ಬರುವಂತೆ ಎಲ್ಲರೂ ಶ್ರಮಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರು ಕೋವಿಡ್‌–19 ಲಸಿಕೆ ಬಗ್ಗೆ ಗೊಂದಲ ಇರಿಸಿಕೊಳ್ಳದೇ ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಹೇಳಿದರು.

‘ರೋಣ ವಸತಿ ಶಾಲೆಯಲ್ಲಿ ಒಟ್ಟು 26 ಮಂದಿಗೆ ಸೋಂಕು ದೃಢಪಟ್ಟಿದ್ದು ಎಲ್ಲರಿಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಸತಿ ಶಾಲೆಯ ಮಕ್ಕಳನ್ನು ಸ್ಥಳಾಂತರ ಮಾಡಲಾಗಿದ್ದು, ಪಾಲಕರು ಆತಂಕಗೊಳ್ಳುವ ಅಗತ್ಯವಿಲ್ಲ’ ಎಂದು ಹೇಳಿದರು.

‘ನರಗುಂದದ ಪರಿಶಿಷ್ಟ ಜಾತಿ ಹೆಣ್ಣುಮಗಳ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣವನ್ನು ಡಿಎಸ್‌ಪಿ ರಾಮನಗೌಡ ಹಟ್ಟಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿಗೆ ತಕ್ಕ ಶಿಕ್ಷೆ ವಿಧಿಸಲು ತನಿಖಾ ಕಾರ್ಯ ಮುಂದುವರಿದಿದೆ’ ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

***

ಲಸಿಕೆ ಬಗ್ಗೆ ಸಾರ್ವಜನಿಕರು ಅನಗತ್ಯ ಭಯ ಬೀಳಬಾರದು. ಅದನ್ನು ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ

-ಸಿ.ಸಿ.ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.