ADVERTISEMENT

ಪ್ರತಿ ಕ್ವಿಂಟಲ್‌ಗೆ ₹5,875 ಬೆಂಬಲ ಬೆಲೆ ನಿಗದಿ

ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯು ಗುಣಮಟ್ಟದ ಕಡಲೆ ಖರೀದಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 4:29 IST
Last Updated 1 ಫೆಬ್ರುವರಿ 2026, 4:29 IST
ಸಿ.ಎನ್‌.ಶ್ರೀಧರ್‌
ಸಿ.ಎನ್‌.ಶ್ರೀಧರ್‌   

ಗದಗ: ‘2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್‌ಎಕ್ಯು ಗುಣಮಟ್ಟದ ಕಡಲೆ ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆ ಹುಟ್ಟುವಳಿಯನ್ನು ಕನಿಷ್ಠ ಬೆಂಬಲ ಬಲೆ ಯೋಜನೆ ಅಡಿಯಲ್ಲಿ ಖರೀದಿಸುವ ಕುರಿತು ನಡೆದ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸರ್ಕಾರದ ಮಾರ್ಗಸೂಚಿಗಳ ಅನ್ವಯ ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಲ್‌ನಂತೆ ಗರಿಷ್ಠ 40 ಕ್ವಿಂಟಲ್ ಎಫ್ಎಕ್ಯು ಗುಣಮಟ್ಟದ ಕಡಲೆ ಕಾಳು ಖರೀದಿಸಬೇಕು. ಖರೀದಿ ಪ್ರಕ್ರಿಯೆಯಲ್ಲಿ ಎಫ್ಎಕ್ಯು ಗುಣಮಟ್ಟದ ಪರಿಶೀಲನೆಗೆ ಅಧಿಕಾರಿಗಳು, ಸಿಬ್ಬಂದಿಯನ್ನು ನೇಮಿಸಿಕೊಂಡು, ಅಂತಹವರಿಗೆ ಗ್ರೇಡಿಂಗ್ ಮಾಡುವ ಕುರಿತು ತರಬೇತಿ ನೀಡಲು ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ADVERTISEMENT

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ ಸುಧಾ ಬಂಡಿ ಮಾತನಾಡಿ, ‘ಗದಗ ಜಿಲ್ಲೆಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಹುಟ್ಟುವಳಿ ಬೆಳೆದಿದ್ದು ಪ್ರಸ್ತುತ ಗದಗ, ನರಗುಂದ, ರೋಣ, ಗಜೇಂದ್ರಗಡ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ಮಾರುಕಟ್ಟೆ ಸಮಿತಿಗಳಲ್ಲಿ ಕಡಲೆ ಹುಟ್ಟುವಳಿಯ ಆವಕ ಆಗುತ್ತಿದೆ’ ಎಂದು ತಿಳಿಸಿದರು.

‘ಸರ್ಕಾರವು ಕಡಲೆ ಹುಟ್ಟುವಳಿಗೆ ಪ್ರತಿ ಕ್ವಿಂಟಲ್ ₹5,875 ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿ ಅನ್ವಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ (ಮಾರ್ಕ್‌ಫೆಡ್) ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿದೆ. ರೈತರು ನೋಂದಣಿ ಕಾರ್ಯದ ಕಾಲಾವಧಿಯನ್ನು ಆದೇಶ ಹೊರಡಿಸಿದ ದಿನಾಂಕದಿಂದ 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು’ ಎಂದು ವಿವರಿಸಿದರು.

ಜಿಲ್ಲೆಯ 70 ಕಡೆಗಳಲ್ಲಿ ಕಡಲೆ ಕಾಳು ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಯಿತು.

ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಆಹಾರ, ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಮೇಶ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಮಾರ್ಕೆಟಿಂಗ್ ಫೆಡರೇಷನ್ ಶಾಖಾ ವ್ಯವಸ್ಥಾಪಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.‌‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.