ಗದಗ: ‘ಒಂದು ವರ್ಷದಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಭ್ರಷ್ಟಾಚಾರವನ್ನು ಮಾತ್ರ ಅವ್ಯಾಹತವಾಗಿ ಮುಂದುವರಿಸಿದೆ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಆರೋಪ ಮಾಡಿದರು.
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಖಂಡಿಸಿ ಜೆಡಿಎಸ್ ವತಿಯಿಂದ ನಗರದ ಗಾಂಧಿ ಸರ್ಕಲ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
‘ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎನ್ನುವುದಕ್ಕೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿರುವುದೇ ಸಾಕ್ಷಿಯಾಗಿದೆ. ದಲಿತರ ಕಲ್ಯಾಣಕ್ಕೆ ಮೀಸಲಾಗಿದ್ದ ಸಾವಿರ ಕೋಟಿ ಹಣ ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.
‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದರು. ರೈತರ ಸಹಾಯಧನ, ಪ್ರೋತ್ಸಾಹಧನ, ವಿದ್ಯಾರ್ಥಿವೇತನ ತಡೆಹಿಡಿದರು. ಯಾವುದೇ ಜನಪರ ಕಾರ್ಯಕ್ರಮಗಳನ್ನು ನೀಡದೇ ರಾಜ್ಯದ ಬೊಕ್ಕಸ ಖಾಲಿ ಮಾಡಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಇದೊಂದು ಉದ್ರಿ ಸರ್ಕಾರ’ ಎಂದು ದೂರಿದರು.
‘ಏಳನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿದರೂ ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿರುವ ಇಂತಹ ಭ್ರಷ್ಟ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು.
ಜೆಡಿಎಸ್ ಕಾರ್ಯಕರ್ತರು ಇಲ್ಲಿನ ಹುಯಿಲಗೋಳ ನಾರಾಯಣರಾವ್ ವೃತ್ತದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕೆಲಕಾಲ ರಸ್ತೆ ತಡೆ ನಡೆಸಿದರು. ಬಳಿಕ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ಮುಖಂಡರಾದ ಬಸವರಾಜ ಅಪ್ಪಣ್ಣವರ, ಪ್ರಫುಲ್ ಪುಣೇಕರ, ಮಲ್ಲಿಕಾರ್ಜುನ ಪರ್ತಗೌಡ್ರ, ಮಂಜುಳಾ ಮೇಟಿ, ವೀರಪ್ಪ ಜಿರ್ಲಿ, ಡಾ. ಶರಣಪ್ಪ ಹೂಗಾರ, ಕೆ.ಎಚ್.ಕೊಳ್ಳಿಮಠ, ಮರಿಯಪ್ಪ ಬಳ್ಳಾರಿ, ಹಾಜಿಅಲಿ ಕೊಪ್ಪಳ, ತಿಪ್ಪಣ್ಣ ಹುಡೇದ, ಅಮರೇಶ ಅಂಗಡಿ, ಕುಮಾರ ಜಿಗಳೂರ, ಸುಪ್ರಿತ್ ಬಾಗಲಕೋಟ, ಸುನೀಲ ಹುಬ್ಬಳ್ಳಿ, ಯಲ್ಲಪ್ಪ ಹೂಗಾರ, ಯಲ್ಲಪ್ಪ ಹೊಂಬಳ ಇದ್ದರು.
ಈಗ ನಡೆಯುತ್ತಿರುವುದು ಉದ್ರಿ ಸರ್ಕಾರ ಗ್ಯಾರಂಟಿಗೆ ಹಣ ಹೊಂದಿಸಲು ಬೆಲೆ ಏರಿಕೆ ದಲಿತರಿಗೆ ಮೀಸಲಿಟ್ಟ ಹಣ ದುರ್ಬಳಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.