
ಗದಗ: ‘ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆಹಾನಿಯಾಗಿರುವ ರೈತರಿಗೆ ಸರ್ಕಾರ ಪರಿಹಾರ ನೀಡಿದ್ದು, ಜಿಲ್ಲೆಗೆ ₹91 ಕೋಟಿ ಬಿಡುಗಡೆಯಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿಬಿಟಿ ಮುಖಾಂತರ ಬೆಳೆಹಾನಿ ಪರಿಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
‘ಗದಗ ಮತ್ತು ಶಿರಹಟ್ಟಿ ತಾಲ್ಲೂಕಿನ ರೈತರಿಗೆ ₹21 ಕೋಟಿ, ನರಗುಂದ ಮತ್ತು ರೋಣ ತಾಲ್ಲೂಕಿನ ರೈತರಿಗೆ ₹55 ಕೋಟಿ ಪರಿಹಾರವನ್ನು ಸೋಮವಾರ ಡಿಬಿಟಿ ಮುಖಾಂತರ ವಿತರಿಸಲಾಗಿದೆ. ನಂತರ ಉಳಿದ ತಾಲ್ಲೂಕುಗಳಿಗೆ ಬೆಳೆಹಾನಿ ಪರಿಹಾರ ವಿತರಿಸಲಾಗುವುದು’ ಎಂದು ತಿಳಿಸಿದರು.
‘ಈ ಬಾರಿಯ ಮುಂಗಾರಿನಲ್ಲಿ ರೈತರಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಆದರೆ, ರೈತರಿಗಾದ ಅಷ್ಟೂ ನಷ್ಟವನ್ನು ಭರಿಸುವುದು ಸಾಧ್ಯವಾಗುವುದಿಲ್ಲ. ರಾಜ್ಯ ಸರ್ಕಾರ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡುವ ಮೂಲಕ ರೈತರ ನೆರವಿಗೆ ನಿಂತಿದೆ’ ಎಂದು ತಿಳಿಸಿದರು.
‘ಇದಾದ ಮೇಲೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪ್ರತಿ ಹೆಕ್ಟೇರ್‌ಗೆ ₹8,500 ಹಣವನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಅದು ಕೂಡ ಆದಷ್ಟು ಬೇಗ ಬಿಡುಗಡೆಯಾಗಲಿದೆ’ ಎಂದು ತಿಳಿಸಿದರು.
‘ತೋಟಗಾರಿಕೆ ಬೆಳೆಹಾನಿ ಸಮೀಕ್ಷೆ ಕೈಗೊಂಡು ಜಿಲ್ಲೆಯ 18,540 ರೈತರಿಗೆ ಪರಿಹಾರ ವಿತರಿಸಲಾಗಿದೆ. ಈ ಸಲದ ಮುಂಗಾರಿನಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ, ಸೇವಂತಿ ಹಾಗೂ ಕೃಷಿ ಬೆಳೆಗಳಾದ ಹೆಸರು, ಗೋವಿನಜೋಳ, ಶೇಂಗಾ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿವೆ’ ಎಂದು ತಿಳಿಸಿದರು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.