
ಗದಗ: ‘ಸವಿತಾ ಮಹರ್ಷಿಗಳು ಸಾಮವೇದ ರಚಿಸಿದವರು. ಪ್ರತಿಯೊಬ್ಬರೂ ಅಂದವಾಗಿ ಕಾಣಲು ಸವಿತಾ ಸಮಾಜದವರ ಕೊಡುಗೆ ಅಪಾರವಾಗಿದೆ’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಶಿವನು ಸವಿತಾ ಮಹರ್ಷಿಗಳಿಗೆ ಮಂಗಳವಾದ್ಯಗಳನ್ನು ಕೊಟ್ಟನು ಎಂದು ಉಲ್ಲೇಖಿಸಲಾಗಿದೆ. ಸವಿತಾ ಸಮಾಜದವರು ಸಂಗೀತ ಪ್ರಿಯರಾಗಿದ್ದು ಶುಭ ಸಮಾರಂಭಗಳಲ್ಲಿ ವಾದ್ಯ ನುಡಿಸುವುದನ್ನು ಕಾಣಬಹುದಾಗಿದೆ’ ಎಂದು ಹೇಳಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಮಾತನಾಡಿ, ‘ಸರ್ಕಾರದ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಿಸುತ್ತಿರುವುದು ಸಂತಸದ ವಿಷಯ. ಸಮಸಮಾಜ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಶ್ರಮದ ಮೂಲಕ ಗುರುತಿಸಿಕೊಂಡಿರುವ ಸಮಾಜವೇ ಸವಿತಾ ಸಮಾಜವಾಗಿದೆ. ಸವಿತಾ ಮಹರ್ಷಿಗಳ ತತ್ವಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.
ಇದೇ ಸಂದರ್ಭದಲ್ಲಿ ಸಮಾಜದ ಹಿರಿಯರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿಡಿಪಿಐ ಆರ್.ಎಸ್.ಬುರುಡಿ, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ರವಿಕುಮಾರ್ ರೆಡ್ಡಿ, ಹನುಮಂತಪ್ಪ, ವೆಂಕಟೇಶ ರಣತೂರ, ಸಮಾಜದ ಗಣ್ಯರು ಹಿರಿಯರು, ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಸವಿತಾ ಸಮಾಜದ ಅಧ್ಯಕ್ಷ ಕೃಷ್ಣ ಹಡಪದ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು. ಪಿಪಿಜಿ ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.