ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ವಿಶೇಷ ಅಭಿಯಾನ

ಅಭಿಯಾನ ಯಶಸ್ಸಿಗೆ ಶ್ರಮಿಸಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 4:37 IST
Last Updated 28 ನವೆಂಬರ್ 2020, 4:37 IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತಾಲ್ಲೂಕು ಅಧಿಕಾರಿಗಳ ಜತೆಗಿನ ವಿಡಿಯೊ ಕಾ‌ನ್ಫರೆನ್ಸ್‌ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಮಾತನಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತಾಲ್ಲೂಕು ಅಧಿಕಾರಿಗಳ ಜತೆಗಿನ ವಿಡಿಯೊ ಕಾ‌ನ್ಫರೆನ್ಸ್‌ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಮಾತನಾಡಿದರು.   

ಗದಗ: ’ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆಗೆ ವಿಶೇಷ ಅಭಿಯಾನ ಆಯೋಜಿಸಲಾಗಿದೆ‘ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಲ್ಲ ತಾಲ್ಲೂಕುಗಳ ಅಧಿಕಾರಿಗಳ ಜತೆಗಿನ ವಿಡಿಯೊ ಕಾ‌ನ್ಫರೆನ್ಸ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನ.29, ಡಿ.6 ಮತ್ತು 13ರಂದು ಮತದಾರರ ವಿಶೇಷ ಅಭಿಯಾನ ನಡೆಯಲಿದೆ. ಜನವರಿ 18ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಈ ಅಭಿಯಾನದಲ್ಲಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆಗೊಳಿಸುವ, ಪರಿಷ್ಕರಿಸುವ ಹಾಗೂ ತೆಗೆದು ಹಾಕುವ ಪ್ರಕ್ರಿಯೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ, ತಹಶೀಲ್ದಾರ್‌ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಆಕ್ಷೇಪಣೆ ಸಲ್ಲಿಕೆಗೆ ಡಿ.17 ಕೊನೆಯ ದಿನ ಎಂದು ತಿಳಿಸಿ, ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಬೇಕು’ ಎಂದು ಸೂಚಿಸಿದರು.

‘ಸದ್ಯದಲ್ಲೇ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯಲಿದ್ದು ಇಲಾಖೆಗಳು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಇರುವ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಚುನಾವಣಾ ಕರ್ತವ್ಯಗಳನ್ನು ಜಾಗ್ರತೆಯಿಂದ ನಿಭಾಯಿಸಬೇಕು. ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಚುನಾವಣೆ ನಡೆಸಬೇಕಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ಕೋವಿಡ್-19 ನಿಯಂತ್ರಣಕ್ಕೆ ಬರುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ, ಚಿಕಿತ್ಸೆ ಹಾಗೂ ಸಂಪರ್ಕಿತರ ಗುರುತಿಸುವಿಕೆಯನ್ನು ನಿಲ್ಲಿಸಬಾರದು. ಅದು ನಿರಂತರವಾಗಿ ನಡೆಸಬೇಕು. ಅಲ್ಲದೇ ಇಲಾಖೆಗಳು ಕೋವಿಡ್-19 ನಿಯಂತ್ರಣ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೂವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸೋಂಕಿತರ ಪ್ರಮಾಣ ಉಲ್ಬಣಗೊಂಡಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಳ್ಳುವುದರ ಮೂಲಕ ಸೋಂಕಿತರಿಗೆ ಚಿಕಿತ್ಸೆ ಒದಗಿಸಬೇಕು’ ಎಂದು ಸೂಚಿಸಿದರು.

ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಡಿಎಚ್‌ಒ ಡಾ.ಸತೀಶ ಬಸರೀಗಿಡದ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್‌ ಅನಿಲಕುಮಾರ್ ಮುದ್ದಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ನಗರಸಭೆ ಪೌರಾಯುಕ್ತ ರಮೇಶ ಜಾಧವ ಸೇರಿದಂತೆ ಆಯಾ ತಾಲ್ಲೂಕುಗಳ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.