ADVERTISEMENT

ಜಿಲ್ಲೆಯ ಶೈಕ್ಷಣಿಕ ಪ್ರಗತಿ ಸಾಧನೆಗೆ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಸಿನ್‌ರಿಂದ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 1:47 IST
Last Updated 20 ನವೆಂಬರ್ 2020, 1:47 IST
ಗದುಗಿನ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಮಾತನಾಡಿದರು
ಗದುಗಿನ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಮಾತನಾಡಿದರು   

ಗದಗ: ‘ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಿಯಾಯೋಜನೆ ರೂಪಿಸಿ, ಅದನ್ನು ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯ ಶೈಕ್ಷಣಿಕ ಪ್ರಗತಿ ಸಾಧನೆಗೆ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚಿಸಿದರು.

ಇಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

‘ಕಳೆದ ವರ್ಷ ಗದಗ ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಶಾಲೆ ಆರಂಭವಾದ ನಂತರ ನಿಯಮಿತವಾಗಿ ಭೇಟಿ ನೀಡಿ, ಸೂಕ್ತ ಸಲಹೆ ನೀಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕು’ ಎಂದು ಸೂಚಿಸಿದರು.

‘ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದೆ. ಮುಂದಿನ ದಿನಗಳಲ್ಲಿ ಅಧಿಕವಾದಲ್ಲಿ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಕಾಲೇಜುಗಳು ಆರಂಭವಾಗಿದ್ದು, ಆದ್ಯತೆ ಮೇರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಮಾಡಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಚುರುಕುತನದಿಂದ ಕೆಲಸ ನಿರ್ವಹಿಸಬೇಕು’ ಎಂದು ತಿಳಿಸಿದರು.

‘ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅಲ್ಲದೇ ಪೋಡಿ ಮುಕ್ತ ಗ್ರಾಮಗಳಾಗಿ ಪರಿವರ್ತಿಸಬೇಕು. ಬೆಳೆ ಸಮೀಕ್ಷೆ ಪೂರ್ಣಗೊಂಡಿದ್ದು ಆನ್‌ಲೈನ್‌ ನೋಂದಣಿ ಕಾರ್ಯವನ್ನು ಶೀಘ್ರ ಮುಗಿಸಬೇಕು. ಪ್ರವಾಹ ಹಾಗೂ ಮಳೆಯಿಂದ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ನಡೆಸಿ ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಬೇಕು’ ಎಂದು ತಿಳಿಸಿದರು.

ನಗರೋತ್ಥಾನ ಯೋಜನೆ, 14ನೇ ಹಣಕಾಸು ಯೋಜನೆ, ಸ್ವಚ್ಛ ಭಾರತ ಮಿಷನ್, ಅಮೃತ್‌ ಯೋಜನೆ ಕಾಮಗಾರಿಗಳು ಬಹಳ ದಿನಗಳಿಂದ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕು. ನರೇಗಾ ಯೋಜನೆ ಅಡಿ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸಬೇಕು’ ಎಂದು ಹೇಳಿದರು.

ಸಭೆಗೂ ಮುನ್ನ ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಇದ್ದರು.

ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಆನಂದ್ ಕೆ., ಡಿಎಫ್‌ಒ ಸೂರ್ಯಸೇನ್‌, ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಇದ್ದರು.

‘ತಿಂಗಳಿಗೊಮ್ಮೆ ಪರಿಶೀಲನೆ ನಡೆಸಿ’

‘ಅರಣ್ಯ ಭೂಮಿ ಒತ್ತುವರಿ ಕುರಿತಂತೆ ಜಂಟಿ ಸಮೀಕ್ಷೆ ಮಾಡುವ ಮೂಲಕ ಅರಣ್ಯ ಭೂಮಿಯನ್ನು ಹದ್ದುಬಸ್ತುಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಹೇಳಿದರು.

‘ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸೇರಿದಂತೆ ಇತರೆ ನಿಗಮಗಳಲ್ಲಿ ಎರಡು ಮೂರು ವರ್ಷಗಳಲ್ಲಿ ಕೈಗೊಂಡ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಈ ಕುರಿತು ಜಿಲ್ಲಾ ಮಟ್ಟದಲ್ಲಿ ಮಾಸಿಕ ಪರಿಶೀಲನೆ ನಡೆಸಿ ಕಾಮಗಾರಿಗಳ ಮುಕ್ತಾಯಕ್ಕೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.