
ಗದಗ: ‘ಅಂಗವಿಕಲರಿಗೆ ಇರುವ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಸಮಾಜ ಅವರನ್ನು ಗೌರವದಿಂದ ಕಾಣಬೇಕು ಎಂಬ ಉದ್ದೇಶದಿಂದ ವಿಶ್ವ ಅಂಗವಿಕಲರ ದಿನಾಚರಣೆ ಆಚರಿಸಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾ ಆಡಳಿತ ಹಾಗೂ ಅಂಗವಿಕಲರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಮತ್ತು ಸಂಘಗಳ ಸಹಯೋಗದಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಅಂಗವಿಕಲರಿಗೆ ಇರುವ ಹಕ್ಕುಗಳ ರಕ್ಷಣೆಯಾಗಬೇಕು. ಅವರ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಕಾನೂನು ಸೇವಾ ಪ್ರಾಧಿಕಾರ ಅಂಗವಿಕಲರ ಸಹಾಯವಾಣಿ ಸಂಖ್ಯೆ 15100 ಸಂಪರ್ಕಿಸಿ ಪರಿಹಾರ ಕಂಡಕೊಳ್ಳಬಹುದಾಗಿದೆ. ಸಮಾಜದಲ್ಲಿ ಇತರರ ಜತೆಗೆ ಅವರು ಸಮಾನವಾಗಿ ಬದುಕುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಜಾರಿಯಾಗಿರುವ ಎಲ್ಲ ಸೌಲಭ್ಯಗಳು ಅವರಿಗೆ ದೊರಕಿಸಬೇಕು’ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಅಂಗವಿಕಲರನ್ನು ಸನ್ಮಾನಿಸಲಾಯಿತು. ಅಂಗವಿಕಲರ ದಿನಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಜಿ, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪದ್ಮಾವತಿ ಜಿ., ಸಮಾಜ ಕಲ್ಯಾಣ ಉಪ ನಿರ್ದೇಶಕಿ ನಂದಾ ಹಣಬರಟ್ಟಿ, ಎಂಆರ್‌ಡಬ್ಲ್ಯು, ವಿಆರ್‌ಡಬ್ಲ್ಯು ಹಾಗೂ ಅಂಗವಿಕಲರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ಮತ್ತು ಸಂಘಗಳು, ಇಲಾಖೆಯ ಸಿಬ್ಬಂದಿ ಇದ್ದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.
‘ಅಂಗವಿಕಲರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಅವರಿಗೆ ಅನುಕಂಪ ಬೇಕಾಗಿಲ್ಲ; ಅವರಿಗೆ ಮನೋಸ್ಥೈರ್ಯ ತುಂಬಿ ಮುನ್ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು. ‘ಜಿಲ್ಲೆಯಲ್ಲಿನ ಅಂಗವಿಕಲರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗದಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಸಮಾಜದಲ್ಲಿ ಅಂಗವಿಕಲರನ್ನು ಗೌರವದಿಂದ ಕಾಣುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದರು.
‘ಅವಕಾಶಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಯಾಗಿ ಬದುಕು ನಿರ್ವಹಿಸುವುದು ಸಾರ್ಥಕವೆನಿಸುತ್ತದೆ. ಹಾಗಾಗಿ ಅಂಗವಿಕಲರು ಸ್ವಾವಲಂಬಿಯಾಗಿ ಬದುಕು ಸಾಗಿಸಲು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು’ ಎಂದರು.
ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ 21414 ಯುಡಿಐಡಿ ಕಾರ್ಡ್ ವಿತರಿಸಲು ಕ್ರಮವಹಿಸಲಾಗಿದೆ. ಅಂಗವಿಕಲರು ಸ್ವಾವಲಂಬಿಯಾಗಿ ಬದುಕಲು ಸರ್ಕಾರದಿಂದ ಯಂತ್ರ ಚಾಲಿತ ವಾಹನ ನೀಡಲಾಗುತ್ತಿದ್ದು ಸರ್ಕಾರಿ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು.–ಕೆ.ಮಹಾಂತೇಶ, ಜಿಲ್ಲಾ ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.