ಗದಗ: ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಕ್ರಮವಹಿಸಬೇಕು. ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಹೆಚ್ಚಿನ ಗಮನಹರಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲೇ ಇರಬೇಕು. ಅತಿವೃಷ್ಟಿ ಅಥವಾ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸಮರ್ಪಕವಾಗಿ ಎದುರಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನ ಜಾನುವಾರುಗಳ ಜೀವಹಾನಿ ತಡೆಯಬೇಕು. ಜತೆಗೆ ಆಸ್ತಿ ರಕ್ಷಣೆ ಮಾಡಬೇಕು’ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಮನೆ, ಶಾಲೆಗಳಿಗೆ ಆಗಿರುವ ಹಾನಿ ಹಾಗೂ ಬೆಳೆ ಹಾನಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ಜಿ.ಎಚ್.ತಾರಾಮಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.
ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು.ಭರತ್ ಎಸ್. ಜಿಲ್ಲಾ ಪಂಚಾಯಿತಿ ಸಿಇಒ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.