ADVERTISEMENT

ಎನ್‌ಇಪಿಯಿಂದ ಸರ್ವಾಂಗೀಣ ಅಭಿವೃದ್ಧಿ: ವಿಧಾನ ಪರಿಷತ್‌ ಎಸ್‌.ವಿ.ಸಂಕನೂರ

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 6:46 IST
Last Updated 6 ಸೆಪ್ಟೆಂಬರ್ 2021, 6:46 IST
ಗದಗ ಜಿಲ್ಲಾ ಪಂಚಾಯ್ತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಉದ್ಘಾಟಿಸಿದರು
ಗದಗ ಜಿಲ್ಲಾ ಪಂಚಾಯ್ತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಉದ್ಘಾಟಿಸಿದರು   

ಗದಗ: ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳ ಕೌಶಲ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.

ಜಿಲ್ಲಾ ಪಂಚಾಯ್ತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ ಜನ್ಮ ದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಹೊಸ ಶಿಕ್ಷಣ ನೀತಿಯಿಂದ ಜ್ಞಾನ ಮತ್ತು ಕೌಶಲದಲ್ಲಿ ದೇಶವು ಪ್ರಪಂಚದಲ್ಲಿಯೇ ಅತ್ಯುನ್ನತ ಸ್ಥಾನಕ್ಕೆ ತಲುಪಲಿದೆ. ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಆನ್‌ಲೈನ್‌ ಮೂಲಕಯಶಸ್ವಿಯಾಗಿ ತರಗತಿ ನಡೆಸಿದ ಶಿಕ್ಷಕ ಸಮುದಾಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಶಿಕ್ಷಕರ ಎನ್.ಪಿ.ಎಸ್ ಯೋಜನೆ ಸೇರಿದಂತೆ ಮತ್ತಿತರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿದೆ’ ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ‘ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ರೂಪಿಸಲು ಶ್ರಮಿಸುತ್ತಿರುವ ಶಿಕ್ಷಕರಿಗೆ ಅಭಿನಂದನೆಗಳು. ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ಪ್ರಾಮಾಣಿಕ ಪ್ರಯತ್ನ ಶಿಕ್ಷಕದ್ದಾಗಿರಲಿ. ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬಳಸಿ ಶಿಕ್ಷಕರು ನಿರಂತರ ಕಲಿಯುತ್ತಿರಬೇಕು ಹಾಗೂ ಕಲಿತಿದ್ದನ್ನು ಕಲಿಸುತ್ತಿರಬೇಕು ಎಂದರು.

ಕೋವಿಡ್ ನಿಯಮ ಪಾಲಿಸಿ ಶಾಲೆ ಆರಂಭಿಸಿದ ಗದಗ ಜಿಲ್ಲೆ ಮಕ್ಕಳ ಹಾಜರಾತಿಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಮತ್ತು ಲಸಿಕೆ ಪಡೆದ ಶಿಕ್ಷಕರ ಪ್ರಮಾಣದಲ್ಲಿಯೂ ಉತ್ತಮ ಸಾಧನೆ ಮಾಡಿದೆ ಎಂದರು.

ಜಮಖಂಡಿಯ ಬಸವ ಚೇತನ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಈಶ್ವರ ಮಂಟೂರ ಉಪನ್ಯಾಸ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಂ.ಬಸವಲಿಂಗಪ್ಪ ಮಾತನಾಡಿದರು.

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂಗಮೇಶ ದುಂದೂರ, ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಕಾಂತಿಲಾಲ್ ಬನ್ಸಾಲಿ, ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟರ, ಡಯಟ್ ಪ್ರಾಚಾರ್ಯ ಎಸ್.ಡಿ.ಗಾಂಜಿ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಶಾಲಾ ಶಿಕ್ಷಕರು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.