ADVERTISEMENT

ಗದಗ: ಉರಿಬಿಸಿಲಲ್ಲಿ ಉರುಳು ಸೇವೆ ನಡೆಸಿ ರೈತರ ಆಕ್ರೋಶ

20ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಸಮಸ್ಯೆ ಬಗೆಹರಿಸಲು ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 7:33 IST
Last Updated 7 ಸೆಪ್ಟೆಂಬರ್ 2025, 7:33 IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಶನಿವಾರ ನಗರದ ಮುಳಗುಂದ ನಾಕಾದಿಂದ ಜಿಲ್ಲಾಡಳಿತ ಭವನದವರೆಗೆ ಉರುಳು ಸೇವೆ ನಡೆಸಿ, ಪ್ರತಿಭಟಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಶನಿವಾರ ನಗರದ ಮುಳಗುಂದ ನಾಕಾದಿಂದ ಜಿಲ್ಲಾಡಳಿತ ಭವನದವರೆಗೆ ಉರುಳು ಸೇವೆ ನಡೆಸಿ, ಪ್ರತಿಭಟಿಸಿದರು.   

ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ನಗರದ ಮುಳಗುಂದ ನಾಕಾದಿಂದ ಜಿಲ್ಲಾಡಳಿತ ಭವನದವರೆಗೆ ಉರಿ ಬಿಸಿಲಿನಲ್ಲಿ ಉರುಳು ಸೇವೆ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

19 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಹೋರಾಟಕ್ಕೆ ಸ್ಪಂದಿಸಿಲ್ಲ ಎಂದು ರೈತರು ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಕ್ಷಣವೇ ಹಕ್ಕುಪತ್ರ ನೀಡಲು ಕ್ರಮವಹಿಸುವಂತೆ ಆಗ್ರಹಿಸಿದರು.

ಉತ್ತರ ಕರ್ನಾಟಕ ಮಹಾಸಭಾ ಅಧ್ಯಕ್ಷ ರವಿಕಾಂತ ಅಂಗಡಿ ಮಾತನಾಡಿ, ‘ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ವಾರಕ್ಕೆ ಒಂದು ಬಾರಿ ಗದಗಕ್ಕೆ ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮತ್ತೇ ಬೆಂಗಳೂರಿಗೆ ತೆರಳುತ್ತಾರೆ. ಇಪ್ಪತ್ತು ದಿನಗಳಿಂದ ಮನೆ ಮಠ ಬಿಟ್ಟು ರೈತರು ಪ್ರತಿಭಟನೆಗೆ ಕುಳಿತಿರುವುದು ಅವರ ಗಮನಕ್ಕೆ ಬಂದಿಲ್ಲವೇ?’ ಎಂದು ಹರಿಹಾಯ್ದರು.

ADVERTISEMENT

‘ಏನೇ ಆಗಲಿ ಸಚಿವರು ಈ ಹಿಂದೆ ನಮಗೆ ಕೊಟ್ಟ ಮಾತಿನಂತೆ ಸಮಸ್ಯೆ ಪರಿಹರಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ’ ಎಂದು ಎಚ್ಚರಿಸಿದರು.

ಕರ್ನಾಟಕ ರಾಜ್ಯ ರೈತರ ಸಂಘ, ರೈತ ಮೋರ್ಚಾ ಮುಖಂಡರು ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಮುಖಂಡರಾದ ಈಶಪ್ಪ ಕಡಕೋಳ, ದ್ಯಾಮಣ್ಣ ಲಮಾಣಿ, ಫಿರೋಜ್ ನದಾಫ್, ಖಾದೀರ್ ಸಾಬ್, ಮಹಮ್ಮದ್ ಶಲವಡಿ, ರಮೇಶ ಮಜ್ಜೂರ, ಚಂಬಣ್ಣ ಪರಸಾಪೂರ, ಶಾಂತವ್ವ ನಾಗಾವಿ, ಸೋಮನಾಥ ಜಾಧವ, ನಾಮದೇವ ಮಾಂಡ್ರೆ, ನಬಿಸಾಬ ನದಾಫ ಸೇರಿದಂತೆ ನಾಗಾವಿ, ಬೆಳಧಡಿ, ಶಿರಹಟ್ಟಿ, ಲಕ್ಷ್ಮೇಶ್ವರ, ಮುರುಡಿ ಹಾಗೂ ಗ್ರಾಮದ ರೈತರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬಗರಹುಕುಂ ಸಾಗುವಳಿದಾರರು ಹಾಗೂ ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಭಾನುವಾರ ನಗರದ ಜಿಲ್ಲಾಡಳಿತ ಭವನದ ಎದುರು ರೊಟ್ಟಿ ಬಡಿಯೋ ಚಳವಳಿಗೆ ನಿರ್ಧರಿಸಲಾಗಿದೆ.
– ರವಿಕಾಂತ ಅಂಗಡಿ, ಉತ್ತರ ಕರ್ನಾಟಕ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.