ADVERTISEMENT

ಗದಗ–ಬಾಗಲಕೋಟೆ ಹೆದ್ದಾರಿ ತಡೆ

ಗೋವಿನಜೋಳ, ಈರುಳ್ಳಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹ: ನ.24ರವರೆಗೆ ಗಡುವು

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 2:37 IST
Last Updated 19 ನವೆಂಬರ್ 2025, 2:37 IST
ಗದಗ–ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ರೈತರೊಂದಿಗೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಮಾತನಾಡಿದರು
ಗದಗ–ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ರೈತರೊಂದಿಗೆ ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಮಾತನಾಡಿದರು   

ಗದಗ: ಬೆಂಬಲ ಬೆಲೆ ಅಡಿ ಗೋವಿನಜೋಳ ಹಾಗೂ ಈರುಳ್ಳಿ ಬೆಳೆ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿ ಕೋಟುಮಚಗಿ ರೈತರು ಮಂಗಳವಾರ ಗದಗ–ಬಾಗಲಕೋಟೆ ರಾಜ್ಯ ಹೆದ್ದಾರಿ ಮಧ್ಯೆ ಚಕ್ಕಡಿ, ಟ್ರ್ಯಾಕ್ಟರ್‌ ನಿಲ್ಲಿಸಿ, ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

‘ಸಾಲ ಮಾಡಿ ಬೆಳೆದ ಬೆಳೆಗೆ ಸಮರ್ಪಕ ದರ ಸಿಗುತ್ತಿಲ್ಲ. ಕೇಂದ್ರ ಸರ್ಕಾರವು ಗೋವಿನಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದೆ. ಆದರೆ, ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ. ಕೃಷಿ ಸಚಿವರು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಪಟ್ಟುಹಿಡಿದರು.

‘ಈರುಳ್ಳಿಗೆ ₹4 ಸಾವಿರದಿಂದ ₹5 ಸಾವಿರ ಬೆಂಬಲ ಬೆಲೆ ನಿಗದಿ ಮಾಡಬೇಕು. ಗೋವಿನಜೋಳಕ್ಕೆ ₹3 ಸಾವಿರ ದರ ನಿಗದಿ ಮಾಡುವವರೆಗೆ ಧರಣಿ ಕೈಬಿಡುವುದಿಲ್ಲ’ ಎಂದು ಎಚ್ಚರಿಸಿದರು.

ADVERTISEMENT

‘ರೈತರು ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿಯಿಂದ ಉಂಟಾದ ನಷ್ಟಕ್ಕೆ ಬೆಳೆ ಪರಿಹಾರವೂ ಬಂದಿಲ್ಲ. ಜಮೀನುಗಳಿಗೆ ಓಡಾಡಲು ಸರಿಯಾದ ರಸ್ತೆ ಇಲ್ಲ. ಸರ್ಕಾರ ತಕ್ಷಣವೇ ರೈತರ ನೆರವಿಗೆ ಬರಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ, ಜಿಲ್ಲಾಧಿಕಾರಿ ಅವರು ಸಹ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸಬೇಕು. ಇಲ್ಲವಾದರೆ, ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

‌ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ತೊಂದರೆ ಎದುರಿಸಿದರು. ಬಳಿಕ ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಪ್ರತಿಭಟನಕಾರರ ಮನವೊಲಿಸಿ, ಧರಣಿ ಹಿಂಪಡೆಯುವಂತೆ ಮಾಡಿದರು. 

ನೂರಾರು ಮಂದಿ ರೈತರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಬೆಂಬಲ ಬೆಲೆ ಖರೀದಿ ಕೇಂದ್ರದ ವಿಷಯ ಸದ್ಯದಲ್ಲೇ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ರೈತರು ನ.24ರವರೆಗೆ ಗಡುವು ನೀಡಿದ್ದಾರೆ
ಗಂಗಪ್ಪ ಎಂ. ಉಪವಿಭಾಗಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.