ADVERTISEMENT

ಗ್ರಾಮೀಣಾಭಿವೃದ್ಧಿ ವಿವಿಯಿಂದ ಜಾನುವಾರುಗಳಿಗೆ ಮೇವು

​ಪ್ರಜಾವಾಣಿ ವಾರ್ತೆ
Published 1 ಮೇ 2021, 14:16 IST
Last Updated 1 ಮೇ 2021, 14:16 IST
   

ಗದಗ: ಕೊರೊನಾ ಎರಡನೇ ಅಲೆಯ ತೀವ್ರತೆ ಅರಿತು ಸರ್ಕಾರ ಕೋವಿಡ್‌ ಕರ್ಫ್ಯೂ ಘೋಷಿಸಿದ್ದು, ಈ ಅವಧಿಯಲ್ಲಿ ಮನುಷ್ಯರ ಜತೆಗೆ ಪ್ರಾಣಿ ಪಕ್ಷಿಗಳಿಗೂ ಸಂಕಷ್ಟ ಎದುರಾಗಿದೆ. ಈ ಕಾರಣದಿಂದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ಜಾನುವಾರುಗಳಿಗೆ ಮೇವು ವಿತರಣೆ ಮಾಡುವ ಕಾರ್ಯಕ್ಕೆ ಮುಂದಾಗಿದೆ.

ಶನಿವಾರ ಗದಗ- ಬೆಟಗೇರಿ ನಗರದಲ್ಲಿನ ಜಾನುವಾರುಗಳಿಗೆ ಮೇವು ವಿತರಣೆ ಮಾಡಲಾಯಿತು. ಆಸಕ್ತರು ಈ ಕಾರ್ಯಕ್ಕೆ ಕೈ ಜೋಡಿಸಬಹುದು ಎಂದು ವಿವಿ ಸಿಬ್ಬಂದಿ ಮನವಿ ಮಾಡಿದರು.

‘ಕೋವಿಡ್‌ ಕರ್ಫ್ಯೂ ಸಂದರ್ಭದಲ್ಲಿ ಹಸಿದ ಜಾನುವಾರುಗಳಿಗೆ ಮೇವು ವಿತರಣೆ ಮಾಡುವುದಷ್ಟೇ ಅಲ್ಲದೆ ವಿಶ್ವವಿದ್ಯಾಲಯದ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನ, ಪ್ಲಾಸ್ಮಾ ದಾನ, ಲಸಿಕೆ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಜತೆಗೆ ಸಾರ್ವಜನಿಕರ ಸಹಕಾರ ಪಡೆದು ಇಂತಹ ಕಾರ್ಯಕ್ಕೆ ಮುಂದಾಗಿರುವುದು ವಿಶ್ವವಿದ್ಯಾಲಯದ ವಿಶೇಷವಾಗಿದೆ’ ಎಂದು ಕುಲಪತಿ ಪ್ರೊ. ವಿಷ್ಣುಕಾಂತ ಎಸ್‌. ಚಟಪಲ್ಲಿ ತಿಳಿಸಿದ್ದಾರೆ.

ADVERTISEMENT

ಲಾಕ್‌ಡೌನ್ ಅವಧಿಯಲ್ಲಿ ಜಾನುವಾರುಗಳಿಗೆ ತೊಂದರೆಯಾಗದಂತೆ ವಿಶ್ವವಿದ್ಯಾಲಯದಲ್ಲಿ ಮೇವು ಬ್ಯಾಂಕ್ ಮಾಡಲಾಗಿದ್ದು, ಜಾನುವಾರುಗಳಿಗೆ ಮೇವು ನೀಡುವ ಮನಸ್ಸಿದ್ದವರು ವಿಶ್ವವಿದ್ಯಾಲಯದ ಸಂಶೋಧನಾ ಸಂಯೋಜಕ ಲಿಂಗರಾಜ ನಿಡುವಣಿ (80505 01377) ಅವರನ್ನು ಸಂಪರ್ಕಿಸಬಹುದು ಎಂದು ಅವರು ಕೋರಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.