ADVERTISEMENT

ಮಾದರಿ ನೀತಿ ಸಂಹಿತೆ ಪಾಲಿಸಿ: ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ವಿಧಾನ ಪರಿಷತ್‍: ಧಾರವಾಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 2:57 IST
Last Updated 17 ನವೆಂಬರ್ 2021, 2:57 IST
ಗದಗ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗಿನ ಸಭೆಯು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅಧ್ಯಕ್ಷತೆಯಲ್ಲಿ ನಡೆಯಿತು
ಗದಗ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗಿನ ಸಭೆಯು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅಧ್ಯಕ್ಷತೆಯಲ್ಲಿ ನಡೆಯಿತು   

ಗದಗ: ‘ಧಾರವಾಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಜಿಲ್ಲೆಯಲ್ಲಿ ನ.9ರಿಂದ ಡಿ.16ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಪ್ರತಿಯೊಬ್ಬರೂ ಕೋವಿಡ್‌ ಮಾರ್ಗಸೂಚಿಗಳ ಜತೆಗೆ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕರ್ನಾಟಕ ವಿಧಾನ ಪರಿಷತ್‍ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಧಾರವಾಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳು ಒಳಪಡಲಿದ್ದು, ಚುನಾವಣಾ ಅಧಿಸೂಚನೆ ಮಂಗಳವಾರ ಪ್ರಕಟವಾಗಿದೆ. ನ.23ರವರೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಸಭಾಂಗಣದಲ್ಲಿ ತಾತ್ಕಾಲಿಕವಾಗಿ ಚುನಾವಣಾ ಅಧಿಕಾರಿಗಳ ಕಚೇರಿ ಆರಂಭಿಸಲಾಗಿದ್ದು ಅಲ್ಲಿಯೇ ನಾಮಪತ್ರಗಳನ್ನು ಸ್ವೀಕರಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ನ.23ರವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ನ.24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.26ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಡಿ.10ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿ. 14ರಂದು ಮತಗಳ ಎಣಿಕೆ ನಡೆಯಲಿದೆ. ಡಿ.16ಕ್ಕೆ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯವಾಗುತ್ತವೆ’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯ ನಡೆಸಲಾಗುವುದು. ಮತದಾನದ ನಂತರ ಡಿ.14ರಂದು ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ವಿಧಾನ ಪರಿಷತ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತ್ತು ನ್ಯಾಯಯುತ ಚುನಾವಣಾ ಕಾರ್ಯ ನಡೆಸಲು ಅಗತ್ಯವಿರುವ ವಿವಿಧ ತಂಡಗಳನ್ನು ಈಗಾಗಲೇ ರಚಿಸಿ ನಿಯೋಜಿತ ಅಧಿಕಾರಿಗಳಿಗೆ ಚುನಾವಣಾ ಕೆಲಸವನ್ನು ಸುಗಮವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್‌ ಕುಮಾರ್ ಎಂ. ಮಾತನಾಡಿ, ‘ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 21 ಸಂಚಾರಿ ದಳ, 7 ವಿಡಿಯೊ ಸರ್ವಲೆನ್ಸ್ ತಂಡ, 14 ವಿಡಿಯೊ ವೀವಿಂಗ್ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಗೆ ಜಿಲ್ಲಾ ನೋಡಲ್ ಅಧಿಕಾರಿಗಳಾಗಿ ಜಿಲ್ಲಾ ಪಂಚಾಯ್ತಿ ಸಿಇಒ ಭರತ್‌ ಎಸ್‌. ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳಾಗಿ ಆಯಾ ತಾಲ್ಲೂಕುಗಳ ಇಒಗಳನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಡಿಎಚ್‌ಒ ಡಾ. ಜಗದೀಶ ನುಚ್ಚಿನ್ ಇದ್ದರು.

ಎಂಸಿಎಂಸಿ ರಚನೆ

‘ಚುನಾವಣಾ ಕಾರ್ಯ ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲೆಯಲ್ಲಿ ಎಂಸಿಎಂಸಿಯನ್ನು (ಮಾಧ್ಯಮ ಪ್ರಮಾಣೀಕರಣ ಮತ್ತು ಮಾನಿಟರಿಂಗ್ ಸಮಿತಿ) ರಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ
ಎಂ.ಸುಂದರೇಶ್‌ಬಾಬು ತಿಳಿಸಿದರು.

‘ಸಮಿತಿಗೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಸದಸ್ಯರಾಗಿರುತ್ತಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿ ಹಾಗೂ ನೋಡಲ್ ಅಧಿಕಾರಿಯಾಗಿರುತ್ತಾರೆ. ಪತ್ರಕರ್ತ ಆರ್.ಎಂ. ಹೆಬ್ಬಳ್ಳಿ ಅವರನ್ನು ಹೆಚ್ಚುವರಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಂಕಿ ಅಂಶ

1,969ಜಿಲ್ಲೆಯಲ್ಲಿರುವ ಒಟ್ಟು ಮತದಾರರ ಸಂಖ್ಯೆ
969ಪುರುಷ ಮತದಾರರು
1,000ಮಹಿಳಾ ಮತದಾರರು
130ಜಿಲ್ಲೆಯಲ್ಲಿ ಸ್ಥಾಪಿಸಲಾಗುವ ಮತಗಟ್ಟೆಗಳ ಸಂಖ್ಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.