ಗದಗ: ‘ಈ ಹಿಂದೆ 4.50 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳು ಇದ್ದವು. 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.50 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿ ಮೂಲ ಸೌಕರ್ಯ ಒದಗಿಸಲಾಗಿದೆ’ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
‘ಇನ್ನೊಂದು ವರ್ಷದಲ್ಲಿ ಉಳಿದ ಪಂಪ್ ಸೆಟ್‌ಗಳನ್ನೂ ಸಕ್ರಮಗೊಳಿಸುವ ಕಾರ್ಯಪೂರ್ಣಗೊಳ್ಳಲಿದೆ. ಇದರ ಜತೆಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಪಡೆಯಲು ಬಯಸಿದ ರೈತರಿಗಾಗಿ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದೇವೆ. ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಜಾಲ ಸೇರಿದಂತೆ ಮೂಲಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂಗಳಿಂದ ಟ್ರಾನ್ಸ್ ಫಾರ್ಮರ್‌ಗಳನ್ನು ನೀಡಲಾಗುತ್ತಿದೆ’ ಎಂದು ತಿಳಿಸಿದರು.
‘ರೈತರ ಪಂಪ್‌ಸೆಟ್‌ಗಳಿಗೆ ಸುಲಭ ಮತ್ತು ಸಮಪರ್ಕ ವಿದ್ಯುತ್ ಸರಬರಾಜು ದೃಷ್ಟಿಯಿಂದ ಬೇಡಿಕೆ ಇರುವಷ್ಟು ಟ್ರಾನ್ಸ್‌ಫಾರ್ಮರ್‌ಗಳನ್ನು ಪೂರೈಸಲಾಗುವುದು. ಇದಕ್ಕಾಗಿ ಟ್ರಾನ್ಸ್‌ಫಾರ್ಮರ್ ಬ್ಯಾಂಕ್ ಮಾಡಿದ್ದೇವೆ. ರೈತರಿಗೆ ಹೊರೆಯಾಗದಂತೆ ಇಲಾಖೆಯ ವಾಹನದಲ್ಲಿಯೇ ಟ್ರಾನ್ಸ್‌ಫಾರ್ಮರ್ ಸಾಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.
ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರಾಜ್ಯದಲ್ಲಿಮೂಲ ಸೌಕರ್ಯ ಹೆಚ್ಚಿಸಲಾಗುತ್ತಿದ್ದು, ಕೆಪಿಟಿಸಿಎಲ್ ವತಿಯಿಂದ ಹೊಸದಾಗಿ 100 ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ವರ್ಷವೂ ಹೆಚ್ಚೆಚ್ಚು ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಪವನ ಹಾಗೂ ಸೌರ ವಿದ್ಯುತ್‌ನ್ನು ಬ್ಯಾಟರಿ ಮೂಲಕ ಸಂಗ್ರಹ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ" ಎಂದರು.
ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ ಪೀರ್ ಎಸ್. ಖಾದ್ರಿ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ ಪಾಂಡೆ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಸೇರಿದಂತೆ ಹೆಸ್ಕಾಂ, ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ಇದ್ದರು.
ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ರಾಜ್ಯದಲ್ಲಿ ಶೇ 99ರಷ್ಟು ಸಾಧನೆಯಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು ಶೇ. 98.49ರಷ್ಟು ಸಾಧನೆ ಮಾಡಲಾಗಿದೆಕೆ.ಜೆ.ಜಾರ್ಜ್ ಇಂಧನ ಸಚಿವ
ಗದಗ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯಿಂದಾಗಿ ಕೆಲವೆಡೆ ವಿದ್ಯುತ್ ಕಂಬ ತಂತಿಗಳು ವಾಲಿವೆ. ಅವುಗಳನ್ನು ಸರಿಪಡಿಸಬೇಕು. ಪರೀಕ್ಷಾ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ವಿದ್ಯುತ್ ನೀಡಬೇಕುಸಿ.ಸಿ.ಪಾಟೀಲ ಶಾಸಕ
ರಾತ್ರಿ ಹೊತ್ತಿನಲ್ಲಿ ತೋಟದ ಮನೆಗಳಿಗೆ ಸಿಂಗಲ್ ಫೇಸ್ ನಿರಂತರ ವಿದ್ಯುತ್ ನೀಡಬೇಕು. 24 ಗಂಟೆಯೊಳಗೆ ರೈತರಿಗೆ ವಿದ್ಯುತ್ ಪರಿವರ್ತಕಗಳು ಸಿಗುವಂತಾಗಬೇಕುಜಿ.ಎಸ್.ಪಾಟೀಲ ಶಾಸಕ
ನಿರಂತರ ಏಳು ತಾಸು ವಿದ್ಯುತ್
‘ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲೇ ನಿರಂತರ ಏಳು ಗಂಟೆ ವಿದ್ಯುತ್ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದೆ’ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
‘ವಿದ್ಯುತ್ ಮಾರ್ಗ ಜಾಲದಿಂದ 500 ಮೀ. ವ್ಯಾಪ್ತಿಯ ಹೊರಗಿರುವ ಪಂಪ್‍ಸೆಟ್‌ಗಳಿಗೆ ಕುಸುಮ್- ಬಿ ಯೋಜನೆಯಡಿ ಸೋಲಾರ್ ವಿದ್ಯುತ್ ಕಲ್ಪಿಸಲಾಗುವುದು. ಈ ಯೋಜನೆಗೆ ನಮ್ಮ ಸರ್ಕಾರದಿಂದ ನೀಡಲಾಗುವ ರಿಯಾಯಿತಿಯನ್ನು ಶೇ 30ರಿಂದ ಶೇ 50ಕ್ಕೆ ಹೆಚ್ಚಳ ಮಾಡಿದೆ. ಅದೇರೀತಿ ಕುಸುಮ್ ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಕಾರ್ಯ ನಡೆಯುತ್ತಿದ್ದು ಇದರಿಂದಾಗಿ ಹಗಲು ವೇಳೆ ರೈತ ಕೃಷಿ ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.