
ಗದಗ: ‘ನಗರದಲ್ಲಿ ಸ್ವಚ್ಛತೆ ಕಾಪಾಡಿದರೆ ಮಾತ್ರ ಆರೋಗ್ಯಕರ ವಾತಾವರಣ ನಿರ್ಮಿಸಲು ಸಾಧ್ಯ’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಘನ ತ್ಯಾಜ್ಯ ನಿರ್ವಹಣೆ ಕುರಿತು ಒಂದು ದಿನದ ಸಾಮರ್ಥ್ಯಾಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
‘ನಗರದಲ್ಲಿ ಉದ್ಯಾನಗಳು ಸ್ವಚ್ಛವಾಗಿದ್ದರೆ ಅಲ್ಲಿನ ಸುತ್ತಮುತ್ತಲಿನ ಪರಿಸರ ಚೆನ್ನಾಗಿರುತ್ತದೆ. ಈ ನಿಟ್ಟಿನಲ್ಲಿ ಘನ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಕಾರ್ಯ ಅತಿ ಮುಖ್ಯವಾಗಿದೆ. ನಮ್ಮ ಮನೆಯ ಒಳಗಡೆ ಹೇಗೆ ನಾವು ಸ್ವಚ್ಛತೆ ಕಾಯ್ದುಕೊಳ್ಳುತ್ತೇವೆಯೋ ಅದೇರೀತಿ, ಸಾರ್ವಜನಿಕ ಸ್ಥಳಗಳನ್ನು ಸಹ ಸ್ವಚ್ಛವಾಗಿಟ್ಟುಕೊಳ್ಳಲು ಶ್ರಮಿಸಬೇಕು. ಸ್ವಚ್ಛತೆಗೆ ಆದ್ಯತೆ ಕೊಟ್ಟು ಪರಿಸರ ಮಾಲಿನ್ಯ ತಡೆಗಟ್ಟಿ ನಗರವನ್ನು ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕು’ ಎಂದರು.
ನಗರಸಭೆ ಸದಸ್ಯ ಎಲ್.ಡಿ.ಚಂದಾವರಿ ಮಾತನಾಡಿ, ‘ಘನ ತ್ಯಾಜ್ಯ ನಿರ್ವಹಣೆಯಲ್ಲಿ ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ. ನಗರದ ಸ್ವಚ್ಛತೆ ಕಾಪಾಡುವುದು ಸ್ವಚ್ಛತಾ ಸಿಬ್ಬಂದಿಯ ಜತೆಗೆ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ. ಕಾಲೇಜುಗಳಲ್ಲಿ ತ್ಯಾಜ್ಯ ವಸ್ತುಗಳ ನಿರ್ವಹಣೆ ಹಾಗೂ ವಿಲೇವಾರಿ ಕುರಿತು ತಿಳಿವಳಿಕೆ ಕಾರ್ಯಕ್ರಮ ಆಯೋಜಿಸಬೇಕು’ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ನಗರಸಭೆ ಸದಸ್ಯರಾದ ಮಹಾಂತೇಶ ನಲವಡಿ, ಸುನಂದಾ ಬಾಕಳೆ, ಶಕುಂತಲಾ ಅಕ್ಕಿ, ಲಕ್ಷ್ಮಿ ಶಂಕರ ಖಾಕಿ, ಮೆಹಬೂಬಸಾಬ ನದಾಫ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಸದಸ್ಯರು, ಸಿಬ್ಬಂದಿ ಭಾಗವಹಿಸಿದ್ದರು.
ಗದಗ ಬೆಟಗೇರಿ ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆನಂದ ಬದಿ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.