
ಗದಗ: ಆರ್‌ಎಸ್‌ಎಸ್‌ನ ಅಂಗ ಸಂಸ್ಥೆಯಾದ ರಾಷ್ಟ್ರೋತ್ಥಾನ ಪರಿಷತ್‌ನವರು ಸರ್ಕಾರದ ಭಾಗವಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಅಂಗನವಾಡಿ ಶಿಕ್ಷಕಿಯರಿಗೆ ಸಹಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಗದಗ ದಲಿತ ಸಂಘಟನೆಗಳ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.
ನಗರದ ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಉದ್ಘಾಟಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 500ಕ್ಕೂ ಹೆಚ್ಚು ಅಂಗನವಾಡಿ ಶಿಕ್ಷಕಿಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
‘ಅಂಗನವಾಡಿ ಶಿಕ್ಷಕಿಯರಿಗೆ ಸರ್ಕಾರದಿಂದ ಅನೇಕ ತರಬೇತಿ ಶಿಬಿರಗಳು ಹಾಗೂ ಸರ್ಕಾರದ ಮಾಹಿತಿಯ ಕಾರ್ಯಾಗಾರಗಳು ಇಲ್ಲಿವರೆಗೆ ಸರ್ಕಾರದ ವತಿಯಿಂದಲೇ ನಡೆಯುತ್ತಿದ್ದವು. ಅವು ಸರ್ಕಾರದ ವತಿಯಿಂದಲೇ ನಡೆಯಬೇಕು ಕೂಡ. ಆದರೆ, ಇಲ್ಲಿ ಸರ್ಕಾರಕ್ಕೂ ಸಂಬಂಧ ಇಲ್ಲದ, ದೇಶದಲ್ಲೇ ನೋಂದಣಿಯಾಗದ ಸಂಘಟನೆಯಿಂದ ಸರ್ಕಾರಿ ನೌಕರರಿಗೆ ಈ ಸಹಮಿಲನ ಕಾರ್ಯಕ್ರಮ ಏರ್ಪಡಿಸಿದ್ದು ಯಾಕೆ’ ಎಂದು ಸಂಘಟನೆಯ ಸಂಚಾಲಕ ಮುತ್ತು ಬಿಳೆಯಲಿ ಪ್ರಶ್ನಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮದ ಉದ್ದೇಶ ಏನು? ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಅನುಮತಿ ಇದೆಯೇ? ಸ್ಥಳೀಯ ಶಾಸಕರಿಗೆ ಈ ಕಾರ್ಯಕ್ರಮದ ಕುರಿತು ಮಾಹಿತಿ ಇದೆಯಾ? ಎಂಬುದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಎಸ್ಎಸ್ ನಮ್ಮ ಸೈದ್ದಾಂತಿಕ ವಿರೋಧಿ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಾರೆ. ಆದರೆ, ತಮ್ಮದೇ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಅದೇ ಆರ್‌ಎಸ್ಎಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅಷ್ಟೇ ಅಲ್ಲದೆ ಹೆಸರಿಗಷ್ಟೇ ಸಹಮಿಲನ ಕಾರ್ಯಕ್ರಮ. ಆದರೆ, ಅವರ ಸಿದ್ಧಾಂತ, ತತ್ವಗಳನ್ನು, ಹಿಂದುತ್ವ ವಿಚಾರಗಳನ್ನು ಇಲ್ಲಿ ಅಂಗನವಾಡಿ ಶಿಕ್ಷಕಿಯರಿಗೆ ತಲೆಗೆ ತುಂಬಿ ಅದನ್ನು ನೀವು ಪ್ರಚಾರ ಮಾಡಿ ಎಂದು ಸರ್ಕಾರಿ ಶಿಕ್ಷಕಿಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಆರೋಪ ಮಾಡಿದ್ದಾರೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅನುಮತಿ ಇದೆಯೇ? ಇಲ್ಲವಾದಲ್ಲಿ ಕಾನೂನು ಬಾಹಿರವಾಗಿ ಸರ್ಕಾರಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡ ಸಂಘಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕುಮುತ್ತು ಬಿಳೆಯಲಿ ಗದಗ ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.