ADVERTISEMENT

ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆ: ಗುರಿ ಸಾಧಿಸದಿದ್ದರೆ ನೋಟಿಸ್‌ ಜಾರಿ

ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 2:54 IST
Last Updated 20 ಡಿಸೆಂಬರ್ 2025, 2:54 IST
ಸಿ.ಎನ್‌.ಶ್ರೀಧರ್‌
ಸಿ.ಎನ್‌.ಶ್ರೀಧರ್‌   

ಗದಗ: ‘ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಡಿ ನಿಗದಿತ ಗುರಿಗಳನ್ನು ಸಾಧಿಸುವಲ್ಲಿ ಕೆಲವು ಇಲಾಖೆಗಳು ಹಿಂದೆ ಬಿದ್ದಿವೆ. ಪ್ರಗತಿ ಸಾಧಿಸದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಎಚ್ಚರಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್‌ಪಿ)ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ಯೋಜನೆ ಅನುಷ್ಟಾನದಲ್ಲಿ ವಿಳಂಬ, ಗುರಿ ಸಾಧನೆ ಕೊರತೆ ಹಾಗೂ ವರದಿ ಸಲ್ಲಿಕೆಯಲ್ಲಿ ನಿರ್ಲರ್ಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಸಭೆಯೊಳಗೆ ಬಾಕಿ ಉಳಿದ ಕಾಮಗಾರಿಗಳು ಹಾಗೂ ಫಲಾನುಭವಿ ಆಧಾರಿತ ಯೋಜನೆಗಳನ್ನು ಪೂರ್ಣಗೊಳಿಸಿ ಸಮಗ್ರ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳ ಅನುಷ್ಟಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆಗೆ ಕ್ರಮ ವಹಿಸಬೇಕು. ಎಸ್‌ಸಿ ಎಸ್‌ಟಿ ಕಾಲೊನಿಯಲ್ಲಿ ಬೀದಿ ದೀಪ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬಮಾಡದೇ ಕೈಗೊಳ್ಳಬೇಕು. ಕಾಮಗಾರಿ ಕೈಗೊಳ್ಳುವಾಗ ಗುಣಮಟ್ಟದ ಕಾಯ್ದುಕೊಳ್ಳುವುದು ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಮುಖ್ಯವಾಗಿದೆ’ ಎಂದರು.

‘ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಟಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಹಿಂದಿರುಗಿ ಹೋಗದಂತೆ ನೋಡಿಕೊಳ್ಳಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಅವರು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಯೋಜನಾ ಅನುಷ್ಟಾನ ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದು, ಪ್ರಗತಿ ವೇಗ ಹೆಚ್ಚಿಸಲು ಅಗತ್ಯ ಕ್ರಮಗಳ ಕುರಿತು ಚರ್ಚಿಸಲಾಯಿತು.

ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಜಿಲ್ಲಾ ಪಂಚಾಯಿತಿ ಅಧಿಕಾರಿ ಎಂ.ವಿ.ಚಳಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಅಂಗವಿಕಲ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಮಹಾಂತೇಶ್ ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರಮೇಶ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಧಾ ಮಣ್ಣೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಬಿ.ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.