
ಗದಗ: ‘ಬಿಪಿಎಲ್‌ನಿಂದ ಎಪಿಎಲ್ ಆಗಿರುವ ಪಡಿತರ ಚೀಟಿಗಳನ್ನು ಮತ್ತೇ ಬಿಪಿಎಲ್‌ಗೆ ಬದಲಾಯಿಸಲು ಕ್ರಮಕ್ಕೆ ಮುಂದಾಗಬೇಕು. ಅರ್ಹ ಫಲಾನುಭವಿಗಳು ಅನ್ನಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರಾಗಬಾರದು’ ಎಂದು ಗದಗ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.
ನಗರದ ಉಪವಿಭಾಗಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಚೇರಿಯಲ್ಲಿ ಶನಿವಾರ ನಡೆದ ಗದಗ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಪಡಿತರ ಚೀಟಿ ವಿಶೇಷ ಸಭೆಯಲ್ಲಿ ಮಾತನಾಡಿದರು.
‘ಅನ್ನಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಸಮಾಜದ ಕಟ್ಟಕಡೆಯ ಕುಟುಂಬದ ಹಸಿವು ನೀಗಿಸಲು ಇದು ಸಹಕಾರಿಯಾಗಿದೆ. ಈ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿಯೇ ತಲುಪುವಂತಾಗಲು ಸಂಬಂಧಪಟ್ಟ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ನಿರ್ವಹಿಸಬೇಕು’ ಎಂದರು.
‘ಗದಗ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ನಿರ್ದೇಶನದ ಮೇರೆಗೆ ಬಿಪಿಎಲ್ ಪಡಿತರ ಚೀಟಿಯಿಂದ ವಂಚಿತರಾದವರನ್ನು ಗುರುತಿಸಿ, ಪಟ್ಟಿ ಮಾಡಬೇಕು. ಅಂತ್ಯೋದಯ ಅನ್ನ ಯೋಜನಾ, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾವಣೆಯಾಗಿರುವ ಪಡಿತರ ಚೀಟಿಗಳನ್ನು ಎಎವೈ/ ಬಿಪಿಎಲ್‌ಗೆ ಬದಲಾಯಿಸಬೇಕಾದರೆ ಹೊಸದಾಗಿ ಅರ್ಜಿ ಸಲ್ಲಿಸಬೇಕು’ ಎಂದರು.
‘ಸಲ್ಲಿಸಬೇಕಾದ ದಾಖಲೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಗ್ರಾಮೀಣ ಭಾಗದಲ್ಲಿ ಪಡಿತರಚೀಟಿಗಳ ಮಾಹಿತಿಗೆ ತಹಶೀಲ್ದಾರ್ ಕಚೇರಿಯ ಆಹಾರ ವಿಭಾಗ ಹಾಗೂ ಗದಗ ಬೆಟಗೇರಿ ಶಹರದಲ್ಲಿ ಬರುವ ಪಡಿತರ ಚೀಟಿಗಳ ಮಾಹಿತಿಗೆ ಗದಗ ಬೆಟಗೇರಿ ನಗರದ ನಗರಾಭಿವೃದ್ಧಿ ಕಾರ್ಯಾಲಯದ ಹತ್ತಿರವಿರುವ ಸಹಾಯಕ ನಿರ್ದೇಶಕ ಕಾರ್ಯಾಲಯ ಸಂಪರ್ಕಿಸಬಹುದಾಗಿದೆ’ ಎಂದು ತಿಳಿಸಿದರು.
‘ಎಎವೈ, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾವಣೆ ಆಗಿರುವ ಪಡಿತರ ಚೀಟಿಗಳನ್ನು ಎಎವೈ, ಬಿಪಿಎಲ್ ಪಡಿತರ ಚೀಟಿಗೆ ಬದಲಾವಣೆ ಮಾಡಲು ಏಪ್ರಿಲ್-2022ರಿಂದ 2025ರ ವರೆಗೆ (3 ವರ್ಷದ ಬ್ಯಾಂಕ್ ಸ್ಟೇಟ್‌ಮೆಂಟ್), ಕುಟುಂಬಕ್ಕೆ ಇರುವ ಜಮೀನಿನ ಮಾಹಿತಿ 7 ಎಕರೆ 20 ಗುಂಟೆ ಒಳಗೆ ಇರುವ ಬಗ್ಗೆ ( ಗ್ರಾಮ ಲೆಕ್ಕಾಧಿಕಾರಿಗಳಿಂದ ಖಾತೆ ಉತಾರ), ರೇಶನ್ ಕಾರ್ಡ್ ಝರಾಕ್ಸ್ ಪ್ರತಿ, ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಪಡಿತರ ಚೀಟಿದಾರರು ಲಿಖಿತವಾಗಿ ತಹಶೀಲ್ದಾರರಿಗೆ ಮನವಿ ಸಲ್ಲಿಸಬೇಕು’ ಎಂದು ತಿಳಿಸಿದರು.
ಆಹಾರ ಇಲಾಖೆ ಅಧಿಕಾರಿಗಳು ಮಾತನಾಡಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಅಡಿ ಗದಗ ತಾಲ್ಲೂಕಿನಲ್ಲಿ 1-6-2025ರವರೆಗೆ (ಎಎವೈ, ಪಿಎಚ್‌ಎಚ್) 2,76,147 ಪಡಿತರ ಚೀಟಿದಾರರಿದ್ದಾರೆ. 2025ರ ಜೂನ್‌ನಲ್ಲಿ 7,441 ಅರ್ಜಿಗಳು ಸ್ವೀಕೃತವಾಗಿದ್ದು, ಆ ಪೈಕಿ 3,787 ಅರ್ಜಿಗಳು ಮಂಜೂರಾಗಿವೆ. 695 ಅರ್ಜಿಗಳು ತಿರಸ್ಕೃತಗೊಂಡಿವೆ. 2,959 ಅರ್ಜಿಗಳು ಬಾಕಿ ಉಳಿದಿವೆ. ಜಿಲ್ಲೆಯಲ್ಲಿ 22,284 ಅರ್ಜಿಗಳು ಸ್ವೀಕೃತವಾಗಿದ್ದು ಆ ಪೈಕಿ 12,373 ಅರ್ಜಿಗಳು ಮಂಜೂರಾಗಿವೆ. 3,311 ಅರ್ಜಿಗಳು ತಿರಸ್ಕೃತಗೊಂಡಿದ್ದು 6,600 ಅರ್ಜಿಗಳು ಬಾಕಿ ಉಳಿದಿವೆ’ ಎಂದು ವಿವರಿಸಿದರು.
ಸಮಿತಿಯ ಸದಸ್ಯರಾದ ಸಾವಿತ್ರಿ ಹೂಗಾರ, ಮಲ್ಲು ಬಾರ್ಕೇಕರ, ಸಂಗಮೇಶ ಕರಕಲಮಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಬಸವರಾಜ ಕಡೆಮನಿ, ಆಹಾರ ಇಲಾಖೆಯ ಅಧಿಕಾರಿಗಳು ಇದ್ದರು.
ರಾಜ್ಯ ಸರ್ಕಾರದ ಆಶಯದಂತೆ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಆದಷ್ಟು ಶೀಘ್ರ ಬಿಪಿಎಲ್ ಪಡಿತರದಾರರಿಗೆ ಎದುರಾಗುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು–ಅಶೋಕ ಮಂದಾಲಿ ಗದಗ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ
ಗದಗ ಮತಕ್ಷೇತ್ರದಲ್ಲಿನ ಬಡ ಕುಟುಂಬಗಳನ್ನು ಪಟ್ಟಿ ಮಾಡಿ ಅವರಿಗೆ ಬಿಪಿಎಲ್ ಕಾರ್ಡ್ ಮಂಜೂರು ಮಾಡಬೇಕು. ಬಿಪಿಎಲ್ ಕಾರ್ಡ್ ಮಂಜೂರಾತಿಗಾಗಿ ಬಾಕಿ ಉಳಿದಿರುವ ಅರ್ಜಿಗಳ ಪರಿಶೀಲನೆ ನಡೆಸಿ ನಿಗದಿತ ಅವಧಿಯಲ್ಲಿಯೇ ಮಂಜೂರು ಮಾಡಬೇಕು–ಕೃಷ್ಣಗೌಡ ಪಾಟೀಲ ಗದಗ ತಾಲ್ಲೂಕು ಪಂಚ ಗ್ಯಾರಂಟಿ ಸಮಿತಿ ಸದಸ್ಯ