
ಗದಗ: ‘ಜಿಲ್ಲೆಯು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇ 99.4ರಷ್ಟು ಗುರಿ ಸಾಧಿಸಿ ಪ್ರಥಮ ಸ್ಥಾನದಲ್ಲಿದೆ. ಈ ಸಾಧನೆಗೆ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಮಿತಿಯ ಸದಸ್ಯರು ಕಾರಣರಾಗಿದ್ದಾರೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ.ಅಸೂಟಿ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಗ್ಯಾರಂಟಿ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಹೊಂದಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ, ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪಂಚ ಗ್ಯಾರಂಟಿ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೂ ಆದ್ಯತೆ ನೀಡಿದ್ದಾರೆ’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್‌ಗಳು ವಿವಿಧ ಕಾರಣಗಳಿಂದ ರದ್ದಾಗಿವೆ. ಕೆಲವು ಬಿಪಿಎಲ್ ಕಾರ್ಡುಗಳು ವಿನಾಕಾರಣ ರದ್ದಾಗಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಕುರಿತು ತಹಶೀಲ್ದಾರರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ಸ್ಥಾನಿಕ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಬೇಕು. ಬಿಪಿಎಲ್ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಶ್ರಮಿಸಬೇಕು. ಆಯಾ ತಾಲ್ಲೂಕಿನಲ್ಲಿ ಬಿಪಿಎಲ್ ಕಾರ್ಡ್ ರದ್ದಾದ ಪಟ್ಟಿಯನ್ನು ಸಮಿತಿಯ ಗಮನಕ್ಕೆ ತರಬೇಕು’ ಎಂದರು.
ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಮೂಲಸೌಕರ್ಯದೊಂದಿಗೆ ಮಹಿಳೆಯರಿಗೆ ಆಸನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಆರೋಗ್ಯಕರ ವಾತಾವರಣ ಕಾಪಾಡಲು ಎಲ್ಲ ಬಸ್ ನಿಲ್ದಾಣಗಳು ಸ್ವಚ್ಛವಾಗಿರುವಂತೆ ಕ್ರಮ ವಹಿಸಬೇಕು’ ಎಂದರು.
ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪಿ.ಬಿ.ಅಳಗವಾಡಿ, ಹೇಮಂತಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಿತಿಯ ಸದಸ್ಯರು, ಪಂಚ ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು–ಬಿ.ಬಿ.ಅಸೂಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ
ಗೃಹ ಜ್ಯೋತಿ ಯೋಜನೆ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಹೆಸ್ಕಾಂ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು.–ಅಶೋಕ ಮಂದಾಲಿ, ಗದಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.