
ಗದಗ: 20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗದಗ-ಮುಂಡರಗಿ-ಹಡಗಲಿ-ಹರಪನಹಳ್ಳಿ ರೈಲ್ವೆ ಮಾರ್ಗ ಸಮೀಕ್ಷೆ ಕಾರ್ಯಕ್ಕೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆ ಜಂಟಿ ಕ್ರಿಯಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಯಲ್ಲಪ್ಪ ನವಲಗುಂದ ಅವರು ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಈ ಮಾರ್ಗ ಅನುಷ್ಠಾನಕ್ಕೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. 2014ರಲ್ಲಿ ಸದಾನಂದಗೌಡರು ಕೇಂದ್ರ ಸಚಿವರಾಗಿದ್ದಾಗ ಸರ್ವೆ ಕಾರ್ಯಕ್ಕೆ ಬಜೆಟ್‍ನಲ್ಲಿ ಅನುಮೋದನೆ ನೀಡಿದ್ದರು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಅಲ್ಲಿಂದ ಇಲ್ಲೀವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆದುಕೊಂಡು ಬಂದಿದೆ ಎಂದು ವಿಷಯ ಪ್ರಸ್ತಾಪಿಸಿದರು.
ಇದಕ್ಕೆ ಧ್ವನಿಗೂಡಿಸಿದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ‘ಈ ಯೋಜನೆ ಎಂ.ಪಿ.ಪ್ರಕಾಶ್ ಸಾಹೇಬರ ಕನಸಾಗಿತ್ತು’ ಎಂದು ಸೋಮಣ್ಣ ಅವರಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ, ‘ಎಂ.ಪಿ.ಪ್ರಕಾಶ್ ಅವರ ನೆನಪಿಗಾಗಿ ಈ ಯೋಜನೆ ಕೈಗೊಳ್ಳುತ್ತೇನೆ’ ಎಂದು ಭರವಸೆ ಕೊಟ್ಟರು.
ಸಮಿತಿ ಪದಾಧಿಕಾರಿಗಳಾದ ಎಸ್.ಎಸ್.ಪಾಟೀಲ, ಅಯ್ಯನಗೌಡ್ ಮಧುಸೂದನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.