ADVERTISEMENT

ಸರ್ಕಾರಿ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ ಮಾದರಿ ನಡೆಗೆ ಮೆಚ್ಚುಗೆ

ಸರಳತೆ ಮೆರೆದ ‌ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 8:20 IST
Last Updated 10 ಆಗಸ್ಟ್ 2020, 8:20 IST
ಎಂ.ಸುಂದರೇಶ್‌ ಬಾಬು
ಎಂ.ಸುಂದರೇಶ್‌ ಬಾಬು   

ಗದಗ: ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅವರು ಪತ್ನಿ ಶಿವಶಂಕರಿ ಅವರಿಗೆ ಇಲ್ಲಿನ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿ ಗಮನ ಸೆಳೆದಿದ್ದಾರೆ.

‘ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಸೌಲಭ್ಯವಿದೆ. ನುರಿತ ವೈದ್ಯರೂ ಇದ್ದಾರೆ. ಈ ಕಾರಣಕ್ಕಾಗಿ ಪತ್ನಿಗೆ ಇಲ್ಲೇ ಹೆರಿಗೆ ಮಾಡಿಸಿದೆ’‌ ಎಂದು ಹೇಳುವ ಮೂಲಕ ಅವರು ಮಾದರಿಯಾಗಿದ್ದಾರೆ.

‘ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅವರು ಅಧಿಕಾರ ಸ್ವೀಕರಿಸಿದ ದಿನದಿಂದಲೂ ಅವರ ಪತ್ನಿ ಇಲ್ಲಿನ ಸರ್ಕಾರಿ ಆಸ್ಪತ್ರೆ ವೈದ್ಯರಿಂದಲೇ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರು. ಶನಿವಾರ ರಾತ್ರಿ ಶಿವಶಂಕರಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿನ ವೈದ್ಯರಾದ ಡಾ. ಶ್ರುತಿ, ಡಾ.ಸಪ್ನಾ, ಡಾ.ಶಿವನಗೌಡ ಅವರು ಸಿಸೇರಿಯನ್‌ ಮೂಲಕ ಭಾನುವಾರ ಬೆಳಿಗ್ಗೆ 5.30ಕ್ಕೆ ಹೆರಿಗೆ ಮಾಡಿಸಿದ್ದಾರೆ. ತಾಯಿ ಮಗು ಇಬ್ಬರೂ ಚೆನ್ನಾಗಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

‘ಯಾವ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂಬುದು ಪ್ರತಿಯೊಬ್ಬರ ವೈಯಕ್ತಿಕ ನಿರ್ಧಾರ. ಈಗಿನ ಮಧ್ಯಮ ಮತ್ತು ಮೇಲ್ಮಧ್ಯಮ ವರ್ಗದ ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳುವುದೆಂದರೆ ಮೂಗು ಮುರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಸರ್ಕಾರಿ ಆಸ್ಪತ್ರೆಯಲ್ಲೇ ಪತ್ನಿಗೆ ಹೆರಿಗೆ ಮಾಡಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಅವರಿಗೆ ಇದು ಎರಡನೇ ಮಗು. ಮೊದಲನೇಯದ್ದು ಹೆಣ್ಣು ಮಗು’ ಎಂದು ಹೆಸರು ಹೇಳಲು ಇಚ್ಛಿಸದ ವೈದ್ಯರೊಬ್ಬರು ತಿಳಿಸಿದರು.

‘ಗದಗ ಜಿಲ್ಲಾಧಿಕಾರಿ ತಮ್ಮ ಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿ, ಸರಳತೆ ಮೆರೆದಿದ್ದಾರೆ. ಅವರ ಈ ನಿರ್ಧಾರ ಸರ್ಕಾರಿ ಆಸ್ಪತ್ರೆಗಳು ಮತ್ತು ಅಲ್ಲಿನ ವೈದ್ಯರ ಮೇಲಿನ ವಿಶ್ವಾಸ ಹೆಚ್ಚಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.