ADVERTISEMENT

ಗದಗ | ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ: ತರಗತಿ ಬಹಿಷ್ಕಾರಕ್ಕೆ ಕರೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 4:47 IST
Last Updated 19 ಸೆಪ್ಟೆಂಬರ್ 2025, 4:47 IST
ಎಂ. ಶಾಂತಿ
ಎಂ. ಶಾಂತಿ   

ಗದಗ: ‘ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಷಯದಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಹಿನ್ನಲೆ, ಸಾವಿರಾರು ಪದವಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ’ ಎಂದು ಎಐಡಿಎಸ್‌ಒ ಗದಗ ಜಿಲ್ಲಾ ಸಂಚಾಲಕಿ ಎಂ.ಶಾಂತಿ ಟೀಕಿಸಿದ್ದಾರೆ.

‘ಎರಡು ತಿಂಗಳಿಂದ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠಗಳು ಸರಿಯಾಗಿ ನಡೆಯುತ್ತಿಲ್ಲ. ಇದೇ ಅವಧಿಯಲ್ಲಿ ಖಾಸಗಿ ಕಾಲೇಜುಗಳಲ್ಲಿ ಪಠ್ಯಕ್ರಮ, ಘಟಕ ಪರೀಕ್ಷೆಗಳು ಮುಗಿದು, ಸೆಮಿಸ್ಟರ್ ಪರೀಕ್ಷೆಗಳಿಗೆ ಸಿದ್ಧತೆ ನಡೆಯುತ್ತಿದೆ. ಆದರೆ, ಬಡ ಮತ್ತು ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುವಂತಾಗಿದೆ’ ಎಂದು ತಿಳಿಸಿದ್ದಾರೆ.

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು 2ನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯುಜಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಲ್ಲ. ಸರ್ಕಾರ ಬಯಸಿದರೆ ಈ ಬಿಕ್ಕಟ್ಟನ್ನು ತಕ್ಷಣವೇ ಪರಿಹರಿಸಬಹುದು. ಆದರೆ, ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ.

ADVERTISEMENT

ಈ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ಖಂಡಿಸಿ, ಎಐಡಿಎಸ್‌ಒ ಸೆ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.