
ಗದಗ: ‘ಸರ್ಕಾರದ ದ್ವಂದ್ವ ನೀತಿಯಿಂದಾಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರ ಬದುಕು ಇಂದು ಬೀದಿಗೆ ಬಿದ್ದಿದೆ. ಇದು ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಟೀಕಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.
ಭಾರತ ಆಹಾರ ನಿಗಮದ ರಾಜ್ಯ ಸಮಿತಿ ಸದಸ್ಯ ರವಿ ದಂಡಿನ ಮಾತನಾಡಿ, ‘ಚಳಿ– ಬಿಸಿಲೆನ್ನೆದೆ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಬಗ್ಗೆ ಅಧಿಕಾರಿ ವರ್ಗಕ್ಕೆ ಕನಿಷ್ಠ ಕಾಳಜಿಯೂ ಇಲ್ಲ. ಅವರಿಗೆ ನ್ಯಾಯ ಒದಗಿಸಬೇಕಿರುವ ಸರ್ಕಾರವೇ ಅನ್ಯಾಯ ಮಾಡುತ್ತಿದೆ’ ಎಂದು ಕಿಡಿಕಾರಿದರು.
ಸಾಮಾಜಿಕ ಹೋರಾಟಗಾರ ರವಿಕಾಂತ ಅಂಗಡಿ, ಪ್ರೊ. ಉಮೇಶ ಹಿರೇಮಠ ಮಾತನಾಡಿದರು.
ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಕೆಲಕಾಲ ಹುಬ್ಬಳ್ಳಿ–ಗದಗ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹುಲಕೋಟಿ ಕೆ.ಎಚ್.ಪಾಟೀಲ ಕಾಲೇಜಿನ ಅತಿಥಿ ಉಪನ್ಯಾಸಕಿ ನೂರಜಹಾನ ಕದಾಂಪುರ ಅಸ್ವಸ್ಥಗೊಂಡರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಬೀದರ್, ಕಲಬುರಗಿ, ಕಾರವಾರ, ಧಾರವಾಡ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಹಾವೇರಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಾರು ಮಂದಿ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅತಿಥಿ ಉಪನ್ಯಾಸಕರ ಜೀವಕ್ಕೆ ತೊಂದರೆ ಆದರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಆಗಲಿದೆಪ್ರೊ. ಹನಮಂತಗೌಡ ಆರ್.ಕಲ್ಮನಿ ಸಂಘದ ರಾಜ್ಯ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.