ADVERTISEMENT

ಗದಗ | ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಶಾಂತಿ, ಸೌಹಾರ್ದತೆದೊಂದಿಗೆ ಸದೃಢ ಸಮಾಜ ನಿರ್ಮಾಣಕ್ಕೆ ಸಚಿವ ಮನವಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 16:04 IST
Last Updated 14 ಆಗಸ್ಟ್ 2024, 16:04 IST
ಹರ್‌ ಘರ್‌ ತಿರಂಗಾ ಅಭಿಯಾನದ ಅಂಗವಾಗಿ ಬುಧವಾರ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತದ ವತಿಯಿಂದ ಸಂವಿಧಾನದ ಪೀಠಿಕೆ ಪಠಣ ನಡೆಯಿತು
ಹರ್‌ ಘರ್‌ ತಿರಂಗಾ ಅಭಿಯಾನದ ಅಂಗವಾಗಿ ಬುಧವಾರ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತದ ವತಿಯಿಂದ ಸಂವಿಧಾನದ ಪೀಠಿಕೆ ಪಠಣ ನಡೆಯಿತು   

ಗದಗ: ‘ಅನೇಕ ಸ್ವಾತಂತ್ರ್ಯ ಹೋರಾಟಗಾರರು, ದೇಶಭಕ್ತರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಜತೆಗೆ ಶಾಂತಿ, ಸೌಹಾರ್ದ ಮತ್ತು ಭಾತೃತ್ವ ಮನೋಭಾವದೊಂದಿಗೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ಹರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ವಾಕ್‌ಥಾನ್‌ಗೆ ಚಾಲನೆ ನೀಡಿ ಮಾತನಾಡಿದರು.

‘ಎಲ್ಲಕಿಂತ ಮುಖ್ಯವಾಗಿ ನಾವು ಇಂದು ಶಾಂತಿ, ಸೌಹಾರ್ದಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಸದೃಢ ಸಮಾಜ ನಿರ್ಮಿಸಲು ಶ್ರಮಿಸಬೇಕಿದೆ. ದೇಶದ ಎಲ್ಲ ಪ್ರಜೆಗಳೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು’ ಎಂದು ತಿಳಿಸಿದರು.

ADVERTISEMENT

ದೇಶಭಕ್ತಿ ಗೀತೆಗಳ ಸ್ಫೂರ್ತಿಯೊಂದಿಗೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ತಿರಂಗಾ ಅಭಿಯಾನವು ಪ್ರಾರಂಭವಾಗಿ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಗಾಂಧಿ ವೃತ್ತಕ್ಕೆ ಬಂದು ತಲುಪಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಸಂವಿಧಾನದ ಪೀಠಿಕೆ ಪಠಿಸಿದರು. ವಾಕಥಾನ್‌ನಲ್ಲಿ ಶಾಲಾ ಮಕ್ಕಳು ಪ್ರಸ್ತುತಪಡಿಸಿದ ಸ್ವಾತಂತ್ರ್ಯ ಹೋರಾಟಗಾರರ ವಿವಿಧ ರೂಪಕಗಳು ಗಮನ ಸೆಳೆದವು.

ವಾಕಥಾನ್‌ನಲ್ಲಿ ಎನ್.ಸಿ.ಸಿ, ಎನ್.ಎಸ್.ಎಸ್, ಮಾಜಿ ಸೈನಿಕರ ಸಂಘ, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್‌ ಇಲಾಖೆ, ಶಾಲಾ ಕಾಲೇಜು ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯಿತು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾ ಪಂಚಾಯಿತಿ  ಸಿಇಒ ಭರತ್‌ ಎಸ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ., ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರವಿ ಗುಂಜೀಕರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.