
ಗಜೇಂದ್ರಗಡ: ‘ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಹೇಳಿದರು.
ಪಟ್ಟಣದ ಎಸ್.ಎಂ. ಭೂಮರಡ್ಡಿ ಕಾಲೇಜಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಎಸ್.ಎಂ. ಭೂಮರಡ್ಡಿ ಪಿಯು ಕಾಲೇಜು ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಮತದಾನ ಮೂಲಕ ದೇಶದ ಪ್ರಗತಿಗೆ ಶ್ರಮಿಸುವ ಜನ ನಾಯಕರನ್ನು ಆಯ್ಕೆ ಮಾಡಲು ಸಂವಿಧಾನ ಪ್ರತಿಯೊಬ್ಬ ನಾಗರಿಕರಿಗೂ ಅವಕಾಶ ಕಲ್ಪಿಸಿದೆ. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗದೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕು’ ಎಂದರು.
ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ವೇಳೆ ಪಟ್ಟಣದ ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಬೈಕ್ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜು ಮೈದಾನ ತಲುಪಿತು. ಕಾಲೇಜು ಪ್ರಾಚಾರ್ಯ ಜಿ.ಬಿ. ಗುಡಿಮನಿ, ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.