
ಗದಗ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು ಲಭ್ಯವಾಗುವಂತೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ವಿಮಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಆರೋಗ್ಯ ರಕ್ಷಣೆ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ತೀವ್ರತರದ ಕಾಯಿಲೆಗಳು ಬಂದಾಗ ಉದಾಸೀನ ಮಾಡುವ ಜನರಿದ್ದಾರೆ. ಅಂತಹವರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಆಶಾ ಕಾರ್ಯಕರ್ತೆಯರು ತಿಳಿವಳಿಕೆ ನೀಡಬೇಕು ಎಂದರು.
ಆರೋಗ್ಯ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದೆ. ಈ ಹಕ್ಕು ಉಲ್ಲಂಘನೆಯಾಗಬಾರದು. ಕಾನೂನು ಸೇವಾ ಪ್ರಾಧಿಕಾರವು ಆರೋಗ್ಯ ಇಲಾಖೆಯೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಬಡಜನರು ಸೇರಿದಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಯೋಜನೆಗಳ ಕುರಿತು ಅರಿವು ಮೂಡಿಸಬೇಕು. ಯೋಜನೆಗಳ ಸೌಲಭ್ಯ ಅವರಿಗೆ ತಲುಪುವಂತಾಗಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ ಮಾತನಾಡಿ, ‘ಪ್ರತಿಯೊಬ್ಬ ವ್ಯಕ್ತಿಗೂ ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗಬೇಕು ಎಂಬ ಉದ್ದೇಶದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ’ ಎಂದರು.
‘ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ಆರೋಗ್ಯ ಇಲಾಖೆಯಿಂದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಆರೋಗ್ಯ ಇಲಾಖೆಯ ಯೋಜನೆಗಳ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ’ ಎಂದರು.
ಜಿಲ್ಲಾ ಎನ್‌ವಿಬಿಡಿಸಿ ಅಧಿಕಾರಿ ಡಾ. ಎಚ್.ಎಲ್.ಗಿರಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ದೇಶ ತಾಂತ್ರಿಕವಾಗಿ ಮುಂದುವರಿದಿದೆ. ಆದರೂ ಕೆಲವೊಂದು ಸ್ಲಂ ಪ್ರದೇಶದಲ್ಲಿನ ಜನರು ತಮ್ಮ ಆರೋಗ್ಯ ರಕ್ಷಣೆಗಾಗಿ ಶ್ರಮಪಡುತ್ತಿದ್ದಾರೆ. ಅಂತಹ ಬಡಜನರಿಗೂ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆರೋಗ್ಯ ಸೇವೆ ದೊರಕಿಸಲು ಪ್ರಯತ್ನಿಸುತ್ತಿದೆ’ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್., ಪಲ್ಸ್ ಪೋಲಿಯೊ ಹಾಗೂ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ.ಭಜಂತ್ರಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಅರುಂಧತಿ ಕುಲಕರ್ಣಿ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.
ಆರೋಗ್ಯ ಇಲಾಖೆಯಿಂದ ಜಾರಿಯಾಗಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಬೇಕು– ಸಿ.ಎಸ್. ಶಿವನಗೌಡ್ರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಚಿಕಿತ್ಸೆಯ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು– ಡಾ. ಎಸ್.ಎಸ್.ನೀಲಗುಂದ, ಡಿಎಚ್‌ಒ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.