ADVERTISEMENT

ಮುಂಡರಗಿ| ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರೀಯ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 6:11 IST
Last Updated 23 ನವೆಂಬರ್ 2025, 6:11 IST
<div class="paragraphs"><p>ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿದರು</p></div>

ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿದರು

   

ಮುಂಡರಗಿ: ‘ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು, ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಸರ್ಕಾರ ಈಗಾಗಲೇ ₹2.5 ಲಕ್ಷ ಕೋಟಿ ಸಾಲ ಮಾಡಿದ್ದು, ಸಾರ್ವಜನಿಕರ ಮೇಲೆ ಹೆಚ್ಚುವರಿಯಾಗಿ ತೆರಿಗೆ ಹೇರಿ ಜನ ಸಾಮಾನ್ಯರ ಹಣ ಲೂಟಿ ಮಾಡುತ್ತಲಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಬಿಜೆಪಿ ಈ ಹಿಂದೆ ಜಾರಿಗೆ ತಂದ ಹಲವು ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ’ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ADVERTISEMENT

‘ನಿತ್ಯ ಅಹಿಂದ ಜಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ದಲಿತರು ಹಾಗೂ ಹಿಂದುಳಿದವರನ್ನು ನಿರ್ಲಕ್ಷಿಸಲಾಗಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ಎಡವಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು.

ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ, ‘ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಸೇರಿದಂತೆ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿದ್ದು, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮುಖ್ಯಮಂತ್ರಿಗಳು ಕ್ಷೇತ್ರಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಜನರು ಕಾಂಗ್ರೆಸ್ ಸರ್ಕಾರ ಆಡಳಿತದಿಂದ ನಿರಾಸೆಗೊಂಡಿದ್ದಾರೆ’ ಎಂದರು.

ಕೊಟ್ರೇಶಪ್ಪ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಸದಸ್ಯ ಪವನ ಮೇಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ ಗುಡದಪ್ಪನವರ ವಂದಿಸಿದರು. ಮುಖಂಡರಾದ ಕೆ.ವಿ. ಹಂಚಿನಾಳ, ಲಿಂಗರಾಜಗೌಡ ಪಾಟೀಲ, ಶಿವಕುಮಾರಗೌಡ ಪಾಟೀಲ, ಮೈಲಾರೆಪ್ಪ ಕಲಕೇರಿ, ಪ್ರಕಾಶ ಮಹಾಜನಶಟ್ಟರ, ರಜನಿಕಾಂತ ದೇಸಾಯಿ, ಬಸವರಾಜ ಬಿಳಿಮಗ್ಗದ, ಎಸ್.ವಿ.ಪಾಟೀಲ, ಮಲ್ಲಿಕಾರ್ಜುನ ಹಣಜಿ, ಪವಿತ್ರಾ ಕಲ್ಲಕುಟಿಗರ ಇದ್ದರು.

ಮುಗಿಯದ ಕುರ್ಚಿ ಕದನ

‘ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕುರ್ಚಿ ಕದನದಲ್ಲಿ ಮಗ್ನರಾಗಿದ್ದು, ಜನ ಸಾಮಾನ್ಯರನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಸಿದ್ಧರಾಮಯ್ಯ ಹೇಳುತ್ತಿದ್ದಾರೆ. ಅಧಿಕಾರ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ವಿವೇಚನೆಗೆ ಬಿಡಲಾಗಿದ್ದು, ಉಳಿದ ಅವಧಿಗೆ ನಾನೇ ಮುಖ್ಯಮಂತ್ರಿ ಎಂದು ಡಿ.ಕೆ. ಶಿವಕುಮಾರ ಹೇಳುತ್ತಿದ್ದಾರೆ. ಸರ್ಕಾರ ಹಾಗೂ ಸಚಿವರ ದಂಡು ನಿತ್ಯ ದೆಹಲಿ ಯಾತ್ರೆ ಕೈಗೊಂಡಿದ್ದು, ಜನಸಾಮಾನ್ಯರಲ್ಲಿ ಅಸಹ್ಯ ಮೂಡಿಸಿದೆ’ ಎಂದು ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.