ADVERTISEMENT

ವಿಷಯ ಜ್ಞಾನದ ಜತೆಗೆ ತತ್ವಶಾಸ್ತ್ರವೂ ಅವಶ್ಯಕ

ಪಂಚಾಯತ್‌ರಾಜ್‌ ವಿ.ವಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕುಲಸಚಿವ ಅಭಿಮತ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 16:24 IST
Last Updated 5 ಸೆಪ್ಟೆಂಬರ್ 2020, 16:24 IST
ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಬಸವರಾಜ ಲಕ್ಕಣ್ಣವರ ಮಾತನಾಡಿದರು
ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಬಸವರಾಜ ಲಕ್ಕಣ್ಣವರ ಮಾತನಾಡಿದರು   

ಗದಗ: ‘ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದಲ್ಲಿರುವ ವಿಷಯಗಳನ್ನು ಬೋಧಿಸುವುದರ ಜತೆಗೆ, ಮಾನವೀಯ ಮೌಲ್ಯಗಳನ್ನೂ ತಿಳಿಸಿಕೊಡಬೇಕು’ ಎಂದು ಕುಲಸಚಿವ ಪ್ರೊ. ಬಸವರಾಜ ಎಲ್. ಲಕ್ಕಣ್ಣವರ ಹೇಳಿದರು.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‌‘ಒಬ್ಬ ಗುರು ಉತ್ತಮ ಶಿಕ್ಷಕ ಎನಿಸಿಕೊಳ್ಳಬೇಕಾದರೆ ಆತನಿಗೆ ವಿಷಯ ಜ್ಞಾನದ ಜೊತೆಗೆ ತತ್ವಶಾಸ್ತ್ರ ಹಾಗೂ ಮನಃಶಾಸ್ತ್ರವೂ ತಿಳಿದಿರಬೇಕು’ ಎಂದು ಅಭಿಪ್ರಾಯಪಟ್ಟರು.

ADVERTISEMENT

ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಪ್ರಶಾಂತ ಜೆ.ಸಿ. ಮಾತನಾಡಿ, ‘ಪ್ರಸ್ತುತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲರೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ವೃತ್ತಿ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಅವರ ಆದರ್ಶ ಹಾಗೂ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ದೇಶದ ಶೈಕ್ಷಣಿಕ ವ್ಯವಸ್ಥೆಯನ್ನು ಸದೃಢಗೊಳಿಸಿ, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಹೇಳಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ತರಬೇತಿ, ಪ್ರಕಟಣೆ ಹಾಗೂ ಮೇಲ್ವಿಚಾರಣೆ ಕೇಂದ್ರದ ಸಹಾಯಕ ನಿರ್ದೇಶಕ ಅಬ್ದುಲ್ ಅಜೀಜ್, ಆಡಳಿತಾಧಿಕಾರಿ ಶಶಿಭೂಷಣ, ವಿಶೇಷಾಧಿಕಾರಿ ಉಮೇಶ ಬಾರಕೇರ, ಎಂಎಸ್‌ಡಬ್ಲ್ಯು ವಿಭಾಗದ ಸಂಯೋಜಕಿ ಗೀತಾ ಬಂಗಾರಿ, ಎಂಎಸ್ಸಿ ವಿಭಾಗದ ಸಂಯೋಜಕ ಸುರೇಶ ಲಮಾಣಿ ಹಾಗೂ ವಿದ್ಯಾರ್ಥಿಗಳು ಮಾತನಾಡಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ವಿಶ್ವವಿದ್ಯಾಲಯದ ಅಧಿಕಾರಿ ವರ್ಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.