ಮುಂಡರಗಿ: ‘ಕಕ್ಕೂರುತಾಂಡಾ ಸೇರಿದಂತೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದಿಂದ (ಕೆಆರ್‌ಐಡಿಎಲ್) ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು’ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ತಿಳಿಸಿದರು.
ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಿವಿಧ ಕಾಮಗಾರಿ ಆರಂಭಿಸಿ ಐದು ವರ್ಷಗಳು ಕಳೆದಿವೆ. ಬಹುತೇಕ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಅಂತಹ ಗ್ರಾಮಗಳನ್ನು ಆದರ್ಶ ಗ್ರಾಮ ಎಂದು ಘೋಷಣೆ ಮಾಡಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪ್ರಾಣೇಶ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 35,919 ರೈತರ ಪೈಕಿ 24,737 ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸೌಲಭ್ಯ ಪಡೆದಿದ್ದಾರೆ’ ಎಂದು ಮಾಹಿತಿ ನೀಡಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಸ್. ತಾಂಬೋಟಿ ಮಾತನಾಡಿ, ‘ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ ಯೋಜನೆಯ ಅಡಿ ₹50 ಸಾವಿರ ಅನುದಾನ ಬಿಡುಗಡೆಯಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ₹42.47 ಲಕ್ಷ ನಿಗದಿಯಾಗಿದ್ದು, ₹ 12.11 ಲಕ್ಷ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿವಾರ್ಹಕ ಅಧಿಕಾರಿ ವಿಶ್ವನಾಥ ಹೊಸಮನಿ ಮಾತನಾಡಿ, ‘ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಮಾತ್ರ ಬಳಕೆ ಮಾಡಬೇಕು. ಅನ್ಯಕಾರ್ಯಕ್ಕೆ ಬಳಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ, ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಹೆಸ್ಕಾಂ, ವಲಯ ಅರಣ್ಯಾಧಿಕಾರಿ, ಸಿಡಿಪಿಒ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಗತಿ ವರದಿಯನ್ನು ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.