ಬಸ್
– ಪ್ರಜಾವಾಣಿ ಚಿತ್ರ
ಗದಗ: ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸೋಮವಾರ ಮಹಿಳೆಯೊಬ್ಬರ ಮೇಲೆ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ದೃಶ್ಯಗಳು ಸಿ.ಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಸುನಗಾ ಗ್ರಾಮದ ನಿವಾಸಿ ಶಾಂತವ್ವ ಸಿದ್ದಪ್ಪ ಕೋರ್ತಿ (46) ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕಳುಹಿಸಲಾಗಿದೆ.
ಮೂವರು ಮಹಿಳೆಯರು ಬಸ್ ನಿಲ್ದಾಣದಿಂದ ಹೊರಹೋಗುತ್ತಿದ್ದ ವೇಳೆ ಪ್ಲಾಟ್‌ಫಾರಂ ಕಡೆಗೆ ಬರುತ್ತಿದ್ದ ಬಸ್, ಏಕಾಏಕಿ ವೇಗವಾಗಿ ಮಹಿಳೆಯರತ್ತ ನುಗ್ಗಿದೆ. ಮೂವರು ಮಹಿಳೆಯರ ಪೈಕಿ ಶಾಂತವ್ವಳ ಮೇಲೆ ಬಸ್ ಹರಿದು, ಎರಡೂ ಕಾಲುಗಳು ನುಜ್ಜುಗುಜ್ಜಾಗಿವೆ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
ಘಟನೆಯಲ್ಲಿ ಮತ್ತೊಬ್ಬ ಮಹಿಳೆಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕರು, ಬಸ್ ನಿಲ್ದಾಣದ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಬೆಟಗೇರಿ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.