
ಗದಗ: ‘ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ನೋಂದಾಯಿತ ಜಾಬ್‌ಕಾರ್ಡ್ ಪಡೆದ ಕುಟುಂಬಸ್ಥರ ಇ- ಕೆವೈಸಿ ಮಾಡಲು ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ. ಗ್ರಾಮದ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಗದಗ ತಾಲ್ಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಕುಮಾರ ಪೂಜಾರ ತಿಳಿಸಿದರು.
ತಾಲ್ಲೂಕಿನ ಅಸುಂಡಿ ಗ್ರಾಮ ಪಂಚಾಯಿತಿಗೆ ಮಂಗಳವಾರ ಭೇಟಿ ನೀಡಿ ಉದ್ಯೋಗ ಖಾತ್ರಿ ಜಾಬ್‌ಕಾರ್ಡ್ ಇ- ಕೆವೈಸಿ ಪ್ರಗತಿ ಪರಿಶೀಲಿಸಿ ಮಾತನಾಡಿದರು.
ಅ.31ರ ಒಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮುಖಚಹರೆ ದೃಢೀಕರಣ ಮಾಡಲು ಮನೆಗಳಿಗೆ ಭೇಟಿ ನೀಡುತ್ತಾರೆ. ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಅಗತ್ಯ ಸಿಬ್ಬಂದಿ ನಿಯೋಜಿಸಿ ಸಕ್ರಿಯವಾಗಿರುವ ಜಾಬ್‌ಕಾರ್ಡ್‌ಗಳಿಗೆ ಇ-ಕೆವೈಸಿ ಕಾರ್ಯ ಮಾಡುತ್ತಿದ್ದಾರೆ ಎಂದರು.
‘ಇ-ಕೆವೈಸಿ ಮಾಡಿಸಿಕೊಳ್ಳದ ಜಾಬ್ ಕಾರ್ಡ್‌ಗಳು ಮುಂದಿನ ದಿನಗಳಲ್ಲಿ ಎನ್ಎಂಆರ್ ಸೃಜನೆ ಮಾಡಲು ಸಾಧ್ಯವಾಗುವುದಿಲ್ಲ. ಜತೆಗೆ ನಿಷ್ಟ್ರಿಯವಾಗುವ ಸಾಧ್ಯತೆ ಇರುವ ಕಾರಣ ಅ.31ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
ತಾಲ್ಲೂಕು ವ್ಯಾಪ್ತಿಯಲ್ಲಿ 27 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ 26 ಸಾವಿರಕ್ಕೂ ಹೆಚ್ಚು ಜಾಬ್‌ಕಾರ್ಡ್‌ಗಳ ಇ- ಕೆವೈಸಿ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿಡಿಒ ಹಾಗೂ ಟಿಆರ್‌ಎಂ ಮಂಜನಾಥ ರಜಪೂತ ಇದ್ದರು.
ಉದ್ಯೋಗ ಖಾತ್ರಿ ಯೋಜನೆಯ ನೋಂದಾಯಿತ ಕೂಲಿಕಾರರು ಅ.31ರೊಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.-ಕುಮಾರ ಪೂಜಾರ ಸಹಾಯಕ ನಿರ್ದೇಶಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.