ADVERTISEMENT

ಉತ್ತರ ಕರ್ನಾಟಕಕ್ಕೆ ಬೇಕು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಗದೀಶ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2025, 14:48 IST
Last Updated 2 ಮಾರ್ಚ್ 2025, 14:48 IST
ಮುಂಡರಗಿಯ ವಿ.ಜಿ. ಲಿಂಬಿಕಾಯಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಎಪಿಎಂಸಿ ವರ್ತಕರ ಸಂಘದ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು
ಮುಂಡರಗಿಯ ವಿ.ಜಿ. ಲಿಂಬಿಕಾಯಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಎಪಿಎಂಸಿ ವರ್ತಕರ ಸಂಘದ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು   

ಮುಂಡರಗಿ: ‘ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಹಲವು ಬೃಹತ್ ವಾಣಿಜ್ಯ ನಗರಗಳಿದ್ದು, ಹೊರದೇಶ ಹಾಗೂ ಹೊರರಾಜ್ಯಗಳೊಂದಿಗೆ ನಿತ್ಯ ನೂರಾರು ಕೋಟಿ ವ್ಯಾಪಾರ ವಹಿವಾಟು ನಡೆಸುತ್ತಿವೆ. ರಾಜ್ಯದ ಬೆಂಗಳೂರು ನಗರವನ್ನು ಹೊರತುಪಡಿಸಿ ಬೇರೆಲ್ಲಿಯೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಿಲ್ಲ. ಆದ್ದರಿಂದ ಉತ್ತರ ಕರ್ನಾಟಕದಲ್ಲಿ ಒಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

ಪಟ್ಟಣದ ವಿ.ಜಿ. ಲಿಂಬಿಕಾಯಿ ಶಾಲಾ ಆವರಣದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಎಪಿಎಂಸಿ ವರ್ತಕರ ಸಂಘದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬೆಳಗಾವಿಯು ಉತ್ಕೃಷ್ಟ ತರಕಾರಿ ಬೆಳೆಯಲು ರಾಜ್ಯದಲ್ಲಿಯೇ ಹೆಸರುವಾಸಿಯಾಗಿದೆ. ಕೇಂದ್ರ ಸರ್ಕಾರದ ಉಡಾನ್‌ ಯೋಜನೆಯ ಅಡಿಯಲ್ಲಿ ಉತ್ತರ ಕರ್ನಾಟಕದ ಯಾವುದಾದರೂ ದೊಡ್ಡ ನಗರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಎಲ್ಲರಿಗೂ ಅನಕೂಲವಾಗುತ್ತದೆ’ ಎಂದು ಅವರು ತಿಳಿಸಿದರು.

ADVERTISEMENT

‘ಶಿಂಗಟಾಲೂರು ಏತ ನೀರಾವರಿ ಯೋಜನೆ ಸಮರ್ಪಕವಾಗಿ ಕಾರ್ಯನಿರ್ವಹಿಸಿದರೆ ಈ ಭಾಗದ ರೈತರ ಬದುಕು ಬಂಗಾರವಾಗಲಿದೆ. ಸ್ಥಳೀಯ ಎಪಿಎಂಸಿಯಲ್ಲಿ ಶೀತಲೀಕರಣ ಘಟಕ ಸ್ಥಾಪಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಗದಗ-ಹರಪನಹಳ್ಳಿ ಮಾರ್ಗವಾಗಿ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ರೈತರಿಗೆ ಅನುಕೂಲವಾಗುವಂತಹ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು’ ಎಂದು ಅವರು ಭರವಸೆ ನೀಡಿದರು.

ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ‘ರಾಜ್ಯ ಸರ್ಕಾರದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿದ್ದು, ರಾಜ್ಯದ ಜನತೆಗೆ ಅಭಿವೃದ್ಧಿ ಮರೀಚಿಕೆಯಾಗಿದೆ. ಗುತ್ತಿಗೆದಾರರಿಗೆ ಸಮರ್ಪಕವಾಗಿ ಹಣ ಪಾವತಿಯಾಗದೇ ಇರುವುದರಿಂದ ಅವರೆಲ್ಲ ವಿಷ ಸೇವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ‘ರೈತರು, ಸೈನಿಕರು ಹಾಗೂ ಶಿಕ್ಷಕರು ಸಮಾಜದ ಕಣ್ಣುಗಳು. ನಾವೆಲ್ಲ ಅವರನ್ನು ಸದಾ ಗೌರವಿಸಬೇಕು. ಎಪಿಎಂಸಿಯಲ್ಲಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಫಸಲನ್ನು ಮಾರಾಟ ಮಾಡುವ ರೈತರಿಗೆ ಸಕಾಲದಲ್ಲಿ ಹಣ ಪಾವತಿಯಾಗಬೇಕು’ ಎಂದು ತಿಳಿಸಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ, ಶಂಕರಣ್ಣ ಮುನವಳ್ಳಿ, ಡಾ.ಜಿ.ಬಿ. ಬಿಡನಾಳ, ಡಾ.ವೀರೇಶ ಹಂಚಿನಾಳ, ಪ್ರಶಾಂತ ತಾವರಗೇರಿ, ಬಿ. ಶಿವರಾಮ ರಡ್ಡಿ, ತಾತನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಕೊಟ್ರೇಶ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಗಾಯಕಿ ಮಹನ್ಯಾ ಪಾಟೀಲ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಅಶ್ವಿನಿ ಗೌಡರ್ ಸಾಧಕರ ಪರಿಚಯ ಮಾಡಿಕೊಟ್ಟರು.

ವರ್ತಕ ವೀರಣ್ಣ ಮೇಟಿ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಂ.ಅಗಡಿ ಕಾರ್ಯಕ್ರಮ ನಿರೂಪಿಸಿದರು. ಕರಬಸಪ್ಪ ಹಂಚಿನಾಳ, ಪವನ್ ಚೋಪ್ರಾ, ಮುದಕಪ್ಪ ಬೆಟಗೇರಿ, ಭರಮಜ್ಜ ಬೀಡನಾಳ, ಅಮೀನಸಾಬ್ ಬಿಸನಳ್ಳಿ, ನಾಗರಾಜ ಹೆಗ್ಗಡಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.