ADVERTISEMENT

ಗದಗ | ಬೇಡಿಕೆಗೆ ಸ್ಪಂದಿಸದಿದ್ದರೆ ಹೋರಾಟ ತೀವ್ರ: ರವಿಕಾಂತ ಅಂಗಡಿ ಎಚ್ಚರಿಕೆ

ಮೂರು ದಿನ ಪೂರ್ಣಗೊಳಿಸಿದ ಅಹೋರಾತ್ರಿ ಧರಣಿ: ರವಿಕಾಂತ ಅಂಗಡಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 4:19 IST
Last Updated 22 ಆಗಸ್ಟ್ 2025, 4:19 IST
ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕರ್ನಾಟಕ ಮಹಾಸಭಾದ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ರವಿಕಾಂತ ಅಂಗಡಿ ಮಾತನಾಡಿದರು
ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಉತ್ತರ ಕರ್ನಾಟಕ ಮಹಾಸಭಾದ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ರವಿಕಾಂತ ಅಂಗಡಿ ಮಾತನಾಡಿದರು   

ಗದಗ: ‘ಇದು ಮಾಡು ಇಲ್ಲವೇ ಮಡಿ ಹೋರಾಟ. ಗದಗ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆ ಮಾತು ಕೊಟ್ಟಂತೆ ನಮ್ಮ ಬೇಡಿಕೆಗಳನ್ನು ಈಡೇರಿಸಲು ತಕ್ಷಣವೇ ಕ್ರಮವಹಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಅವರು ಬರುವವರೆಗೂ ಅಹೋರಾತ್ರಿ ಧರಣಿ ಮುಂದುವರಿಯಲಿದೆ’ ಎಂದು ಉತ್ತರ ಕರ್ನಾಟಕ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ ಎಚ್ಚರಿಸಿದರು.

ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶಿರಹಟ್ಟಿ ಪಟ್ಟಣದ ಫಕೀರೇಶ್ವರ ಮಠದಿಂದ ಪ್ರತಿಭಟನಾ ರ‍್ಯಾಲಿಯೊಂದಿಗೆ 30 ಕಿ.ಮೀ. ಪಾದಯಾತ್ರೆ ನಡೆಸಿ, ಮಂಗಳವಾರದಿಂದ ಜಿಲ್ಲಾಡಳಿತ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರು ದಿನಗಳನ್ನು ಪೂರ್ಣಗೊಳಿಸಿದ್ದು, ಈ ವೇಳೆ ಅವರು ಮಾತನಾಡಿದರು.

‘ನಮ್ಮ ಹೋರಾಟ ತೀವ್ರಗೊಳ್ಳಲಿದೆ. ಒಂದು ವೇಳೆ ಈ ಹೋರಾಟದಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರೇ ನೇರ ಹೊಣೆಯಾಗುತ್ತಾರೆ’ ಎಂದು ಎಚ್ಚರಿಸಿದರು.

ADVERTISEMENT

‘ರೈತರು ತಲತಲಾಂತರದಿಂದ ತಮ್ಮ ಉಪಜೀವನಕ್ಕಾಗಿ ಅರಣ್ಯ ಜಮೀನುಗಳನ್ನು ಸಾಗುವಳಿ ಮಾಡುತ್ತಾ ಬಂದಿದ್ದು, ಕಪ್ಪತ್ತಗುಡ್ಡ ರಕ್ಷಣೆ ಮಾಡಿದ ಬಗರ್‌ಹುಕುಂ ಸಾಗುವಳಿದಾರರಿಗೆ ಹಾಗೂ ಅರಣ್ಯ ಅವಲಂಬಿತರಿಗೆ ಸರ್ಕಾರ ಹಕ್ಕುಪತ್ರ ನೀಡದೇ ವಿನಾಕಾರಣ ಕಿರುಕುಳ ಹಾಗೂ ದೌರ್ಜನ್ಯ ನೀಡುತ್ತಿದೆ’ ಎಂದು ಕಿಡಿಕಾರಿದರು.

‘ನಾಗಾವಿ ಗ್ರಾಮದಲ್ಲಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ರೈತರಿಂದ ಭೂಮಿ ಪಡೆದುಕೊಂಡು ಅವರಿಗೆ ಪರಿಹಾರ ನೀಡದೆ; ಒಕ್ಕಲೆಬ್ಬಿಸಿರುವುದು ಖಂಡನೀಯ’ ಎಂದು ಆರೋಪ ಮಾಡಿದರು.

‘ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಎಲ್ಲ ವಿಷಯಗಳು ಗೊತ್ತಿದ್ದರೂ ಗೊತ್ತಿಲ್ಲದಂತೆ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ. ಸಚಿವರು ಕೊಟ್ಟ ಮಾತಿನಂತೆ ನಡೆದುಕೊಂಡು ರೈತರ ಹಿತ ಕಾಪಾಡಬೇಕಾಗಿದೆ. ಇಲ್ಲವಾದಲ್ಲಿ ಈಗ ಶಾಂತಿಯುತವಾಗಿ ನಡೆಸುತ್ತಿರುವ ಹೋರಾಟದ ರೂಪುರೇಷೆಯಲ್ಲಿ ಬದಲಾವಣೆಗಳಾಗುತ್ತವೆ’ ಎಂದು ಎಚ್ಚರಿಸಿದರು. 

ಪೀರು ರಾಠೋಡ, ರಮೇಶ ಸಜ್ಜಗಾರ, ಪರಮೇಶ ಲಮಾಣಿ, ಎನ್.ಟಿ ಪೂಜಾರ, ಪಾಂಡು ಚವ್ಹಾಣ, ಜಿಲ್ಲೆಯ ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ರೈತರು ಇದ್ದರು.

ಅಕ್ರಮ ಜಮೀನುಗಳನ್ನು ಸಕ್ರಮಗೊಳಿಸಿ ರೈತರ ಬದುಕನ್ನು ಹಸನು ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮುಂದುವರಿಯಲಿದೆ
ಮಂಜುನಾಥ ಮಾಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ

ಅಹೋರಾತ್ರಿ ಧರಣಿಗೆ ಬಿಜೆಪಿ ಬೆಂಬಲ

ಅಹೋರಾತ್ರಿ ಧರಣಿಗೆ ಬಿಜೆಪಿ ಗದಗ ಜಿಲ್ಲಾ ಘಟಕ ಬೆಂಬಲ ವ್ಯಕ್ತಪಡಿಸಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ ಮಾತನಾಡಿ ‘ಉತ್ತರ ಕರ್ನಾಟಕ ಮಹಾಸಭಾದಿಂದ ಹಮ್ಮಿಕೊಂಡ ಈ ಅಹೋರಾತ್ರಿ ಧರಣಿಗೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದರು. ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ. ಜಿಲ್ಲಾಡಳಿತ ಜಿಲ್ಲಾ ಉಸ್ತುವಾರಿ ಸಚಿವರು ಈ ಕೂಡಲೇ ಬಗರ್ ಹುಕುಂ ಅರಣ್ಯ ಅವಲಂಬಿತರು ಮತ್ತು ನಾಗಾವಿ ವಿಶ್ವವಿದ್ಯಾಲಯಕ್ಕೆ ಭೂಮಿಯನ್ನು ಕಳೆದುಕೊಂಡ ರೈತರಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.