ADVERTISEMENT

ಗದಗ| ಓಬವ್ವ ಜಯಂತ್ಯುತ್ಸವ ವ್ಯವಸ್ಥಿತವಾಗಿ ಆಚರಿಸಿ: ಜಿಲ್ಲಾಧಿಕಾರಿ ಡಾ.ದುರಗೇಶ್

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 6:15 IST
Last Updated 31 ಅಕ್ಟೋಬರ್ 2025, 6:15 IST
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಎಡಿಸಿ ಡಾ. ದುರುಗೇಶ್‌ ಕೆ.ಆರ್‌. ಮಾತನಾಡಿದರು
ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಎಡಿಸಿ ಡಾ. ದುರುಗೇಶ್‌ ಕೆ.ಆರ್‌. ಮಾತನಾಡಿದರು   

ಗದಗ: ‘ಸರ್ಕಾರದ ನಿರ್ದೇಶನದಂತೆ ವೀರವನಿತೆ ಒನಕೆ ಓಬವ್ವ ಜಯಂತ್ಯುತ್ಸವವನ್ನು ನ.11ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿ ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಶಿಷ್ಟಾಚಾರದ ಅನ್ವಯ ಜಯಂತ್ಯುತ್ಸವದ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮವಹಿಸಬೇಕು. ವೀರವನಿತೆ ಒನಕೆ ಓಬವ್ವ ಕುರಿತು ಚೆನ್ನಾಗಿ ಓದಿಕೊಂಡಿರುವ ಸಂಪನ್ಮೂಲ ವ್ಯಕ್ತಿಯನ್ನು ಉಪನ್ಯಾಸಕರನ್ನಾಗಿ ಆಯ್ಕೆ ಮಾಡಬೇಕು. ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಬರುವಂತೆ ನೋಡಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಜಯಂತಿ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಒಟ್ಟಾರೆಯಾಗಿ ವೀರ ವನಿತೆ ಓಬವ್ವ ಜಯಂತಿ ಅಚ್ಚುಕಟ್ಟಾಗಿ ನಡೆಸಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

ಸಭೆಯಲ್ಲಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ, ವೇದಿಕೆ ವ್ಯವಸ್ಥೆ, ಉಪಾಹಾರ ವ್ಯವಸ್ಥೆ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೋಟೂರ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಬಿ.ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್.ಎಸ್.ಬುರುಡಿ, ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಹಿರಿಯರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ಸ್ವಾಗತಿಸಿ, ವಂದಿಸಿದರು.