ಲಕ್ಷ್ಮೇಶ್ವರ: ‘ಪಟ್ಟಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮಿಕ ಶಾಲಾ ಕಟ್ಟಡ ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿದೆ. ಈಗಿರುವ ಕಟ್ಟಡವನ್ನು ತೆರವುಗೊಳಿಸಿ ಪುನಃ ಅದೇ ಜಾಗೆಯಲ್ಲಿ ಹೊಸ ಕಟ್ಟಡ ನಿರ್ಮಿಸಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ ಮತ್ತು ಮಾಸಿಕ ಪ್ರಗತಿ ಪರಿಶೀಲನಾ ಸಭೆ ಉದ್ಧೇಶಿಸಿ ಅವರು ಮಾತನಾಡಿದರು.
ಬಿಇಒ ಎಚ್.ಎಂ. ನಾಯಕ ಮಾತನಾಡಿ, ‘ತಾಲ್ಲೂಕಿನಲ್ಲಿ ಅಗತ್ಯವಿರುವ ಕಡೆ ಶಾಲಾ ದುರಸ್ತಿ ಮಾಡಿಸಲಾಗಿದ್ದು, ಏಳು ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಬೇಕಾಗಿದೆ. ತಾಲ್ಲೂಕಿನ ಪುಟಗಾಂವ್‍ಬಡ್ನಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಿರುವ ಪಿಂಕ್ ಶೌಚಾಲಯ ಇನ್ನೂ ಆರಂಭವಾಗಿಲ್ಲ. ಶೀಘ್ರದಲ್ಲಿ ಸಮಸ್ಯೆಯನ್ನು ಬಗೆ ಹರಿಸಿ ಶೌಚಾಲಯ ಆರಂಭಿಸಲು ಕ್ರಮಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.
‘ಅಕ್ಕಿಗುಂದ, ಯತ್ತಿನಹಳ್ಳಿ ಮತ್ತು ಗೊಜನೂರು ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ಅಂಗನವಾಡಿ ಕೇಂದ್ರಗಳನ್ನು ಹಸ್ತಾಂತರಿಸುವ ಕೆಲಸ ಬಾಕಿ ಇದೆ’ ಎಂದು ಸಿಡಿಪಿಒ ಮೃತ್ಯುಂಜಯಪ್ಪ ಗುಡ್ಡದನ್ವೇರಿ ಹೇಳಿದರು.
‘ವಸತಿ ನಿಲಯಗಳಲ್ಲಿ ಯಾವುದೇ ಸಮಸ್ಯೆಗಳು ಇಲ್ಲ. ಆಹಾರ ಪದಾರ್ಥ ಹಾಗೂ ಕಿಟ್‍ಗಳನ್ನು ಸರಿಯಾಗಿ ಪೂರೈಕೆ ಆಗುತ್ತಿದೆ’ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆ ಸಹಾಯಕ ನಿರ್ದೇಶಕ ಮರಿಗೌಡರ ಸಭೆಗೆ ಮಾಹಿತಿ ನೀಡಿದರು.
ಸಾಮಾಜಿಕ ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆ, ಅಗ್ನಿಶಾಮಕ, ಕಾರ್ಮಿಕ, ಲೋಕೋಪಯೋಗಿ, ಕೃಷಿ, ಜಿಲ್ಲಾ ಪಂಚಾಯತ್, ಆರೋಗ್ಯ, ಹೆಸ್ಕಾಂ ಸೇರಿದಂತೆ ಎಲ್ಲ ಇಲಾಖೆಗಳ ತಾಲ್ಲೂಕುಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಂ.ವಿ. ಚಳಗೇರಿ ಮಾತನಾಡಿ, ‘ಎಲ್ಲ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಬರಬೇಕು. ಅಪೂರ್ಣ ಮಾಹಿತಿ ನೀಡಿದರೆ ಯಾರಿಗೂ ಅರ್ಥ ಆಗುವುದಿಲ್ಲ’ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಸೇರಿದಂತೆ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ನಿರ್ಮಿಸಿರುವ ಶಾಲಾ ಕಟ್ಟಡ ಕಳಪೆಯಾಗಿದ್ದು ಮುಂದೆ ಅಪಾಯ ಸಂಭವಿಸುವ ಲಕ್ಷಣಗಳು ಗೋಚರಿಸುತ್ತಿವೆ. ಹಳೆಯ ಕಟ್ಟಡ ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕುಡಾ.ಚಂದ್ರು ಲಮಾಣಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.