ADVERTISEMENT

ಅಪೌಷ್ಟಿಕತೆ ಮುಕ್ತಗೊಳಿಸಿ; ಬಲಿಷ್ಠ ರಾಷ್ಟ್ರ ನಿರ್ಮಿಸಿ

ಪೋಷಣಾ ರಥಕ್ಕೆ ಚಾಲನೆ ನೀಡಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ರಾಜಶೇಖರ ಪಾಟೀಲ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 16:05 IST
Last Updated 25 ಸೆಪ್ಟೆಂಬರ್ 2020, 16:05 IST
ಪೋಷಣ ಮಾಸಾಚರಣೆಯ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು, ನ್ಯಾಯಾಧೀಶ ರಾಜಶೇಖರ ಪಾಟೀಲ, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಆನಂದ್ ಕೆ. ಸೇರಿದಂತೆ ಅತಿಥಿಗಳು ಬಿಡುಗಡೆಗೊಳಿಸಿದರು.
ಪೋಷಣ ಮಾಸಾಚರಣೆಯ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು, ನ್ಯಾಯಾಧೀಶ ರಾಜಶೇಖರ ಪಾಟೀಲ, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಆನಂದ್ ಕೆ. ಸೇರಿದಂತೆ ಅತಿಥಿಗಳು ಬಿಡುಗಡೆಗೊಳಿಸಿದರು.   

ಗದಗ: ‘ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಆರೋಗ್ಯವಂತರಾದರೇ; ದೇಶದ ಭವಿಷ್ಯ ಉಜ್ವಲವಾಗುತ್ತದೆ. ಅಭಿಯಾನದ ಉದ್ದೇಶ ಪ್ರತಿ ಹಳ್ಳಿಗಳ ಮನೆಮನೆಗೂ ತಲುಪಬೇಕು’ ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ರಾಜಶೇಖರ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಹಾಗೂ ಪೋಷಣಾ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಇದೊಂದು ನಿರಂತರ ಅಭಿಯಾನವಾಗಿದ್ದು, ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಜೊತೆಗೆ, ಅವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪೋಷಣಾ ಅಭಿಯಾನವು ಕೇವಲ ಕಾರ್ಯಕ್ರಮವಲ್ಲ; ಬದಲಿಗೆ ಅದೊಂದು ಜನಾಂದೋಲನ ಆಗಿದೆ’ ಎಂದು ಹೇಳಿದರು.

ADVERTISEMENT

‘ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಪೌಷ್ಟಿಕ ಆಹಾರದ ಜೊತೆಗೆ ಸೂಕ್ತ ಚಿಕಿತ್ಸೆ ನೀಡಬೇಕು. ಈ ಮೂಲಕ ದೇಶವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಿ, ಆರೋಗ್ಯವಂತ ಬಲಿಷ್ಠ ರಾಷ್ಟ್ರ ನಿರ್ಮಿಸಬೇಕು’ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಪ್ರಾಸ್ತಾವಿಕವಾಗಿ ಮಾತನಾಡಿ, ‘ಅಪೌಷ್ಟಿಕತೆಯಿಂದ ಮಕ್ಕಳ ಸಾವು ತಡೆಗಟ್ಟುವ ಸಲುವಾಗಿ ಪ್ರತಿವರ್ಷ ದೇಶದಾದ್ಯಂತ ಸೆಪ್ಟೆಂಬರ್‌ ತಿಂಗಳನ್ನು ರಾಷ್ಟ್ರೀಯ ಪೋಷಣ್ ಮಾಸವನ್ನಾಗಿ ಆಚರಿಸಲಾಗುತ್ತದೆ. ಜನರಿಗೆ ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪೋಷಣಾ ರಥದ ಮೂಲಕ ಪ್ರತಿ ಮನೆಮನೆಗೂ ಕಾರ್ಯಕ್ರಮ ತಲುಪಿಸಲಾಗುತ್ತಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಚ್.ಎಚ್.ಕುಕನೂರ ಮಾತನಾಡಿ, ‘ಅಪೌಷ್ಟಿಕತೆಯನ್ನು ದೂರಗೊಳಿಸಿ ದೇಶಕ್ಕೆ ಶಕ್ತಿಶಾಲಿ ತಳಪಾಯ ಹಾಕಬೇಕು. ದೇಶದಲ್ಲಿ ಕುಬ್ಜತೆ, ಅಪೌಷ್ಟಿಕತೆ, ರಕ್ತಹೀನತೆ, ತೂಕ ಕಡಿಮೆ ಇರುವ ಶಿಶುಗಳ ಸಂಖ್ಯೆಯ ಪ್ರಮಾಣ ಕಡಿಮೆಗೊಳಿಸುವುದು ಪೋಷಣಾ ಅಭಿಯಾನದ ಮುಖ್ಯ ಉದ್ದೇಶ’ ಎಂದು ತಿಳಿಸಿದರು.

ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.