ADVERTISEMENT

ಆಕ್ಸಿಜನ್‌ ಉತ್ಪಾದನಾ ಯಂತ್ರ ಖರೀದಿಗೆ ಪ್ರಸ್ತಾವ: ಸಚಿವ ಸಿ.ಸಿ.ಪಾಟೀಲ

ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 3:17 IST
Last Updated 30 ಏಪ್ರಿಲ್ 2021, 3:17 IST
ಸಿ.ಸಿ.‍ಪಾಟೀಲ
ಸಿ.ಸಿ.‍ಪಾಟೀಲ   

ಗದಗ: ‘ಜಿಮ್ಸ್‌ ಆಸ್ಪತ್ರೆಗೆ ಆಕ್ಸಿಜನ್‌ ಉತ್ಪಾದನಾ ಯಂತ್ರದ ಅಗತ್ಯವಿದ್ದು ಖರೀದಿಗಾಗಿ ಆರೋಗ್ಯ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ವಿಚಾರವಾಗಿ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಜಿಮ್ಸ್‌ನಲ್ಲಿ ಈಗಾಗಲೇ 13 ಕೆ.ಎಲ್. ಆಕ್ಸಿಜನ್ ಪೂರೈಕೆಯ ಟ್ಯಾಂಕ್‌ ನಿರ್ಮಿಸಲಾಗಿದ್ದು ಅಗತ್ಯಕ್ಕೆ ತಕ್ಕಂತೆ ಆಕ್ಸಿಜನ್ ಲಭ್ಯವಿದೆ’ ಎಂದು ತಿಳಿಸಿದರು.

‘ರೆಮ್‌ಡಿಸಿವರ್‌ ಲಸಿಕೆಯನ್ನು ಅವಶ್ಯಕತೆ ಇದ್ದವರಿಗೆ ಮಾತ್ರ ನೀಡಬೇಕು.

ADVERTISEMENT

ಜಿಲ್ಲೆಯಲ್ಲಿ 650 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 450 ಮಂದಿ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ. 72 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 128 ಮಂದಿ ಸೋಂಕಿತರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕೋವಿಡ್-19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಅದಕ್ಕಾಗಿ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ಕೋವಿಡ್‌–19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕೋವಿಡ್‌–19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ. ನಿಯಮಗಳ ಜಾರಿಗಾಗಿ ಜಿಲ್ಲಾಡಳಿತಕ್ಕೆ ಮುಕ್ತ ಅಧಿಕಾರ ನೀಡಲಾಗಿದೆ’ ತಿಳಿಸಿದರು.

‘ಜಿಲ್ಲೆಯಲ್ಲಿ 500 ಹಾಸಿಗೆಗಳು ಲಭ್ಯವಿದ್ದು ಅಗತ್ಯವಿದ್ದಲ್ಲಿ 750 ಹಾಸಿಗೆಗಳ ಕೋವಿಡ್ ಕೇರ್‌ ಸೆಂಟರ್‌ ಆರಂಭಿಸಲು ಜಿಲ್ಲಾಡಳಿತ ಕ್ರಮವಹಿಸಲಿದೆ. 150 ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳ ಲಭ್ಯತೆಯನ್ನು ನಿರೀಕ್ಷಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹಾಸಿಗೆಗಳ ಕೊರತೆ ಇಲ್ಲ’ ಎಂದು ಅವರು ತಿಳಿಸಿದರು.

ಜಿಲ್ಲೆಯ ಸಾರ್ವಜನಿಕರು, ವ್ಯಾಪಾರಸ್ಥರು ಸೋಂಕು ನಿಯಂತ್ರಣಕ್ಕಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು ಹಾಗೂ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್‌ ಎಸ್., ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಎಡಿಸಿ ಸತೀಶ್ ಕುಮಾರ ಎಂ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.